ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ವಿಚ್ಛೇದನ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನೊಳಗೊಂಡ ಪೀಠವು ಸಂವಿಧಾನದ ವಿಧಿ 142ರ ಅಡಿಯಲ್ಲಿ ಇಬ್ಬರಿಗೂ ಪರಸ್ಪರ ಸಮ್ಮತಿಯ ವಿಚ್ಛೇದನ ಮಂಜೂರು ಮಾಡಿದೆ.
ವಿಚಾರಣೆ ವೇಳೆ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, "ದಂಪತಿ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆಯಲು ನಿರ್ಧರಿಸಿದ್ದು, ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲಿದ್ದಾರೆ. ಆದ್ದರಿಂದ ಸಂವಿಧಾನದ ವಿಧಿ 142ರ ಅಡಿಯಲ್ಲಿ ವಿಚ್ಛೇದನ ನೀಡಬೇಕು" ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಮನವಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ವಿಚ್ಛೇದನಕ್ಕೆ ಅನುಮೋದನೆ ನೀಡಿತು.
ಜುಲೈ 22ರಂದು ಪರಸ್ಪರ ಸಮ್ಮತಿಯ ವಿಚ್ಛೇದನ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಪಿ.ಎಸ್. ನರಸಿಂಹ, ಅರ್ಜಿಗೆ ಅನುಗುಣವಾಗಿ ನ್ಯಾಯಾಲಯ ಸೂಕ್ತ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು.
ಒಮರ್ ಅಬ್ದುಲ್ಲಾ ಅವರು ಕಳೆದ 15 ವರ್ಷಗಳಿಂದ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. 2016ರಲ್ಲಿ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ತಿರಸ್ಕರಿಸಿತ್ತು. ಬಳಿಕ ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು 2023ರ ಡಿಸೆಂಬರ್ 12ರಂದು ದೆಹಲಿ ಹೈಕೋರ್ಟ್ ಕೂಡ ವಜಾಗೊಳಿಸಿತ್ತು. ನಂತರ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ಆದೇಶದೊಂದಿಗೆ ಈ ಪ್ರಕರಣಕ್ಕೆ ಅಂತ್ಯ ಸಿಕ್ಕಿದೆ.

