ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿಕೊಡಲು 50 ಲಕ್ಷ ರೂ. ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುಧವಾರ ರಾತ್ರಿ ಕರ್ನಾಟಕ ಕಾಲೇಜು ಆವರಣದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಧಾರವಾಡ-ಕಲಘಟಗಿ ನಡುವಿನ ಯರಿಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಒಟ್ಟು 33 ಎಕರೆ ಜಮೀನಿದ್ದು, ಅದರಲ್ಲಿ 13 ಎಕರೆ ಭೂಮಿ ಖರಾಬು ಜಮೀನಾಗಿತ್ತು ಎನ್ನಲಾಗಿದೆ. ಈ ಜಮೀನಿನ ದಾಖಲೆಗಳನ್ನು ಮಾರ್ಪಡಿಸಿ ಕೊಡಲು 50 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇದೇ ವೇಳೆ 13 ಎಕರೆ ಪೈಕಿ 2 ಎಕರೆ ಜಮೀನನ್ನು ಪಡೆಯಲು ತಹಶೀಲ್ದಾರ್ ಪ್ರಯತ್ನಿಸಿದ್ದರು ಎಂಬ ಆರೋಪವೂ ಕೇಳಿಬಂದಿದೆ.
ಬಾಗಲಕೋಟೆಯ ಮಂಜುನಾಥ ಅರಳಿಕಟ್ಟಿ ಅವರು ಯರಿಕೊಪ್ಪ ಹದ್ದಿನಲ್ಲಿ ಖರೀದಿಸಿದ್ದ ಜಮೀನಿನ ಖರಾಬು ಪಹಣಿ ಸರಿಪಡಿಸಿಕೊಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ತಹಶೀಲ್ದಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಲಾಗಿದೆ. ಬಳಿಕ ದೂರುದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ದೂರುದಾರರೂ ಅಧಿಕಾರಿಗಳೊಂದಿಗೆ ಇದ್ದರು. ಡಿವೈಎಸ್‌ಪಿ ರವೀಂದ್ರ ಕುರುಬಗಟ್ಟಿ, ಇನ್ಸ್‌ಪೆಕ್ಟರ್‌ಗಳಾದ ಪ್ರಸಾದ್, ಕರುಣೇಶಗೌಡ, ಪ್ರಸಾದ್ ಪಾನೇಕರ್ ಸೇರಿದಂತೆ ಅಧಿಕಾರಿಗಳ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ಲಂಚ ಸ್ವೀಕರಿಸುತ್ತಿದ್ದ ವೇಳೆ ಸಚ್ಚಿದಾನಂದ ಕುಚನೂರು ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಮೀನು ದಾಖಲೆ ತಿದ್ದುಪಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಇದೇ ವೇಳೆ ತಹಶೀಲ್ದಾರ್ ಕಚೇರಿಯಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿತ್ತು. ಪೂಜೆಯ ಹಿನ್ನೆಲೆಯಲ್ಲಿ ಸುಮಾರು ಎರಡು ಸಾವಿರ ಜನರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು ಎನ್ನಲಾಗಿದೆ. ರಾತ್ರಿಯೇ ಅಡುಗೆ ಮಾಡಲು ಬಾಣಸಿಗರು ಆಗಮಿಸಿದ್ದು, ಕಚೇರಿ ಆವರಣದಲ್ಲಿ ಭರದ ಸಿದ್ಧತೆ ನಡೆದಿತ್ತು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವುದು ಚರ್ಚೆಗೆ ಕಾರಣವಾಗಿದೆ.

