ಬೆಂಗಳೂರು: ಒಂಬತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಜಾತಿ ನಿಂದನೆ ಮಾಡಿ ಆಯಸಿಡ್ ದಾಳಿ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ 52 ವರ್ಷದ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.
ರಾಮನಗರದ ಶಂಕರ ಚಿತ್ರಮಂದಿರದ ಮಾಲೀಕ ಎನ್. ಮಂಜುನಾಥ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿ ಆದೇಶಿಸಿದೆ.
ಪ್ರಕರಣದ ದಾಖಲೆಗಳು ಹಾಗೂ ಸಂತ್ರಸ್ತೆಯ ಹೇಳಿಕೆಗಳನ್ನು ಪರಿಶೀಲಿಸಿದ ನ್ಯಾಯಾಲಯ, ಆರೋಪಿಯ ವಿರುದ್ಧ ಮೇಲ್ನೋಟಕ್ಕೆ ಬಲವಾದ ಸಾಕ್ಷ್ಯಾಧಾರಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯಪಟ್ಟಿದೆ. ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯು ಕೆಲವು ಯುವಕರನ್ನು ಮನೆಗೆ ಕಳುಹಿಸಿ ಜಾತಿ ನಿಂದನೆ ಮಾಡಿಸಿ ಬೆದರಿಕೆ ಹಾಕಿಸಿರುವ ಆರೋಪವೂ ಇದೆ ಎಂದು ಪೀಠ ಉಲ್ಲೇಖಿಸಿದೆ.
ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಅಪರಾಧ ದೃಢಪಟ್ಟರೆ ನಿರೀಕ್ಷಣಾ ಜಾಮೀನು ನೀಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆದರೆ, ಆರೋಪಿ ವಿಚಾರಣಾ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದೆ.
ಪ್ರಕರಣದ ಹಿನ್ನೆಲೆ:
ರಾಮನಗರದ ಶಂಕರ ಚಿತ್ರಮಂದಿರದ ಮಾಲೀಕ ಹಾಗೂ ಕೃಷಿಕನಾದ ಮಂಜುನಾಥ, 9ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಶಾಲೆ ಬಳಿ ಕಾಯುತ್ತಾ ಅಸಭ್ಯವಾಗಿ ಸ್ಪರ್ಶಿಸುವುದು ಹಾಗೂ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ನಿರಂತರ ಕಿರುಕುಳದಿಂದ ಬೇಸತ್ತ ಬಾಲಕಿ 2024-25ನೇ ಸಾಲಿನಲ್ಲಿ ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಾಲಕಿ ಪೊಲೀಸರಿಗೆ ದೂರು ನೀಡಲು ಮುಂದಾದ ಹಿನ್ನೆಲೆ ಕೋಪಗೊಂಡ ಆರೋಪಿ, 2026ರ ಮಾರ್ಚ್ 14ರಂದು ಬಾಲಕಿಯ ಮನೆ ಬಳಿ ತೆರಳಿ ಜಾತಿ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೆ, ತನ್ನೊಂದಿಗೆ ನಾಲ್ವರು ಯುವಕರನ್ನು ಕರೆದುಕೊಂಡು ಹೋಗಿ ಬಾಲಕಿ ಮತ್ತು ಆಕೆಯ ಅಜ್ಜಿಗೆ ಕೊಲೆ ಮಾಡುವುದಾಗಿ ಹಾಗೂ ಮುಖಕ್ಕೆ ಆಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಇದರ ಜೊತೆಗೆ, ಬಾಲಕಿಗೆ ನಿರಂತರವಾಗಿ ಕರೆ ಮಾಡಿ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ್ದು, ತನ್ನ ಸ್ನೇಹಿತೆಯರನ್ನೂ ಕರೆತರಲು ಹೇಳಿದ್ದಾನೆ. ಮಾತು ಕೇಳದಿದ್ದರೆ ಚಾಕುವಿನಿಂದ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ಬಾಲಕಿಯ ಅಜ್ಜಿ ನೀಡಿದ ದೂರಿನ ಆಧಾರದಲ್ಲಿ ರಾಮನಗರ ಟೌನ್ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS), ಪೋಕ್ಸೋ ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ಬಂಧನ ಭೀತಿಯಿಂದ ಆರೋಪಿ ಮೊದಲು ವಿಚಾರಣಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರೂ ಅದು ವಜಾಗೊಂಡಿತ್ತು. ಬಳಿಕ ಹೈಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ವೇಳೆ ಆರೋಪಿಯ ಪರ ವಕೀಲರು, ಬಾಲಕಿ ಹಾಗೂ ಆಕೆಯ ಸ್ನೇಹಿತರು ಸಿನಿಮಾ ಟಿಕೆಟ್ ವಿಚಾರವಾಗಿ ಆರೋಪಿಯನ್ನು ಸಂಪರ್ಕಿಸುತ್ತಿದ್ದರು. ಆರೋಪಿಯಿಂದ ಹಣ, ಚಿನ್ನ ಹಾಗೂ ಆಸ್ತಿ ಕಿತ್ತುಕೊಳ್ಳಲು ಬಾಲಕಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಸುಳ್ಳು ದೂರು ದಾಖಲಿಸಲಾಗಿದೆ ಎಂದು ವಾದಿಸಿದರು.
ಆದರೆ, ಸರ್ಕಾರದ ಪರ ವಕೀಲರು, ಸಂತ್ರಸ್ತೆ ಅಪ್ರಾಪ್ತೆಯಾಗಿದ್ದು, ಆರೋಪಿಯ ವಿರುದ್ಧ ಗಂಭೀರ ಆರೋಪಗಳಿವೆ. ಸಂತ್ರಸ್ತೆ ಪರಿಶಿಷ್ಟ ಜಾತಿಗೆ ಸೇರಿರುವ ಹಿನ್ನೆಲೆಯಲ್ಲಿ ಹಾಗೂ ಮೇಲ್ನೋಟಕ್ಕೆ ಸಾಕ್ಷ್ಯಾಧಾರಗಳಿರುವುದರಿಂದ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 18ರ ಅನ್ವಯ ನಿರೀಕ್ಷಣಾ ಜಾಮೀನು ನೀಡಲು ಅವಕಾಶವಿಲ್ಲ ಎಂದು ನ್ಯಾಯಾಲಯಕ್ಕೆ ವಿವರಿಸಿದರು.

