Dailyhunt Logo
  • Light mode
    Follow system
    Dark mode
    • Play Story
    • App Story
ಬರದ ಛಾಯೆ ನಡುವೆ BWSSB ಕಠಿಣ ಕ್ರಮ: ನೀರು ವ್ಯರ್ಥ ಮಾಡಿದರೆ ದಂಡ ಗ್ಯಾರಂಟಿ!

ಬರದ ಛಾಯೆ ನಡುವೆ BWSSB ಕಠಿಣ ಕ್ರಮ: ನೀರು ವ್ಯರ್ಥ ಮಾಡಿದರೆ ದಂಡ ಗ್ಯಾರಂಟಿ!

AIN Kannada 1 week ago

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಬರದ ಛಾಯೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕುಡಿಯುವ ನೀರಿನ ದುರ್ಬಳಕೆ ತಡೆಯಲು ಕಠಿಣ ಕ್ರಮ ಕೈಗೊಂಡಿದೆ. ಕುಡಿಯುವ ನೀರನ್ನು ಅನಗತ್ಯವಾಗಿ ಬಳಸಿದರೆ 5 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಜಲಮಂಡಳಿ ಎಚ್ಚರಿಕೆ ನೀಡಿದೆ.

ಜಲಮಂಡಳಿ ಅಧ್ಯಕ್ಷೆ ಡಾ. ಮಂಜುಳಾ ಈ ಕುರಿತು ಮಾಹಿತಿ ನೀಡಿದ್ದು, ಕುಡಿಯುವ ನೀರಿನಿಂದ ವಾಹನ ತೊಳೆಯುವುದು, ಕಟ್ಟಡ ಕಾಮಗಾರಿಗೆ ಬಳಸುವುದು ಹಾಗೂ ಈಜುಕೊಳಗಳಿಗೆ ನೀರು ತುಂಬುವುದು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ನೀರಿನ ಪ್ರತಿಯೊಂದು ಹನಿಯನ್ನೂ ಸಂರಕ್ಷಿಸುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ಹಲವು ಜಿಲ್ಲೆಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು, ಕೆರೆ-ಕಟ್ಟೆಗಳು ಬರಿದಾಗುತ್ತಿವೆ. ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬಿತ್ತನೆ ಮಾಡಿದ ಬೆಳೆಗಳಿಗೆ ನೀರಿನ ಅಭಾವ ಎದುರಾಗಿದೆ.

ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಶೇ.29ರಷ್ಟು ಮಳೆ ಕೊರತೆ ದಾಖಲಾಗಿದ್ದು, ಈಗಾಗಲೇ ಶೇ.68ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಸೋಯಾಬಿನ್, ಹೆಸರು, ಉದ್ದು, ಕಬ್ಬು ಹಾಗೂ ಭತ್ತದ ಬೆಳೆಗಳಿಗೆ ಮಳೆಯ ಕೊರತೆಯಿಂದ ಆತಂಕ ಎದುರಾಗಿದೆ.

ಇನ್ನೊಂದೆಡೆ, ಬೆಳಗಾವಿ, ಹುಬ್ಬಳ್ಳಿ ಹಾಗೂ ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ರೈತರಿಗೆ ಸ್ವಲ್ಪ ಮಟ್ಟಿನ ನೆಮ್ಮದಿ ಸಿಕ್ಕಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನೀರಿನ ಮಿತ ಬಳಕೆ ಮಾಡುವಂತೆ ಸಾರ್ವಜನಿಕರಿಗೆ ಜಲಮಂಡಳಿ ಮನವಿ ಮಾಡಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News