ಬೆಂಗಳೂರು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ನಗರದ ಆರ್.ಟಿ. ನಗರ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು ಭಾಸ್ಕರ್ ದೇವಡಿಗ ಎಂದು ಗುರುತಿಸಲಾಗಿದ್ದು, ಅವರು ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಸಾಲಿಗ್ರಾಮದವರಾಗಿದ್ದ ಭಾಸ್ಕರ್ ದೇವಡಿಗ ಅವರು ಕಳೆದ ಎರಡು ದಿನಗಳ ಹಿಂದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಸುಮಾರು 10 ವರ್ಷಗಳ ಹಿಂದೆ ಭಾಸ್ಕರ್ ಅವರ ಪತ್ನಿ ನಿಧನರಾಗಿದ್ದರು. ಅವರ ಮಗಳು ತವರು ಮನೆಗೆ ತೆರಳಿದ್ದರಿಂದ, ಭಾಸ್ಕರ್ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಇದೇ ವೇಳೆ ಅವರು ಈ ದುರ್ಘಟನೆಯ ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆ ಸಂಬಂಧ ಭಾಸ್ಕರ್ ಅವರ ತಂಗಿ ಆರ್.ಟಿ. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

