ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಹಾವಳಿ ಮತ್ತೆ ಮುಂದುವರಿದಿದ್ದು, ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನಗರದ ಜೆ.ಸಿ. ರಸ್ತೆ ವಿನೋಬನಗರದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಂಜೆ ಸುಮಾರು 6 ಗಂಟೆ ವೇಳೆಗೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.
ಈ ವೇಳೆ ಲಾಂಗು, ಮಚ್ಚು ಸೇರಿದಂತೆ ಮಾರಕಾಸ್ತ್ರಗಳನ್ನು ಬಳಸಿಕೊಂಡು ಪರಸ್ಪರ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ವಿನೋಬನಗರದ ಮೌಲಾನಾ ಕಡೆಯವರು ಹಾಗೂ ದೊಡ್ಡಿವಂಶ ಗುಂಪಿನ ನಡುವೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅಜಮ್, ಅಮ್ಜದ್, ಅವೈಜ್, ಮುಬಾರಕ್, ಖಲೀಲ್ ಸೇರಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಗರದಲ್ಲಿ ಇಂತಹ ರೌಡಿ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

