ತುಮಕೂರು ನಗರದಲ್ಲಿ ಭದ್ರತಾ ಸಂಸ್ಥೆಗಳ ನಿಗಾದ ನಂತರ ಶಂಕಿತ ಉಗ್ರನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೇಂದ್ರ ತನಿಖಾ ಸಂಸ್ಥೆಗಳಿಂದ ಬಂದಿರುವ ರಹಸ್ಯ ಹಾಗೂ ನಿಖರ ಮಾಹಿತಿಯ ಆಧಾರದ ಮೇಲೆ ತುಮಕೂರು ನಗರ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತನನ್ನು ಶ್ರೀರಾಮನಗರ ನಿವಾಸಿ ಅಲ್ಲಾಬಕ್ಷು (24) ಎಂದು ಗುರುತಿಸಲಾಗಿದೆ. ಆರೋಪಿಯು ವಿದೇಶಿ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಶಂಕಿತ ವ್ಯಕ್ತಿಗಳೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಸುಮಾರು 20 ದಿನಗಳ ಹಿಂದೆ ಇನ್ಸ್ಟಾಗ್ರಾಮ್ ಮೂಲಕ ಆರಂಭವಾದ ಸಂಪರ್ಕ ನಂತರ ಎಕ್ಸ್ (X) ಪ್ಲಾಟ್‌ಫಾರ್ಮ್‌ನಲ್ಲಿ ಮುಂದುವರೆದಿತ್ತು. ಈ ಅವಧಿಯಲ್ಲಿ ಆತ ದೇಶದ ಆಂತರಿಕ ಭದ್ರತೆ ಮತ್ತು ಶಾಂತಿಗೆ ಧಕ್ಕೆ ತರುವ ರೀತಿಯ ಸಂದೇಶಗಳನ್ನು ಹಂಚಿಕೊಂಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಕೇಂದ್ರ ತನಿಖಾ ಸಂಸ್ಥೆಗಳು ಆರೋಪಿಯ ಡಿಜಿಟಲ್ ಚಟುವಟಿಕೆಗಳನ್ನು ನಿಗಾ ವಹಿಸಿ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಿದ ನಂತರ, ತುಮಕೂರು ನಗರ ಪೊಲೀಸರು ಕ್ಯಾತಸಂದ್ರ ಪ್ರದೇಶದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.
ತನಿಖೆಯ ವೇಳೆ ಆರೋಪಿಗೆ ಮತ್ತೊಬ್ಬ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕವಿದ್ದು, ಆತ ಸಹ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಆತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

