ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡುವಂತೆ ಹಾಗೂ ಜಾಮೀನು ಮಂಜೂರು ಮಾಡುವಂತೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಭಾಗಶಃ ಅಂಗೀಕರಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠ, ಎರಡೂ ಪಕ್ಷಗಳ ವಾದ-ಪ್ರತಿವಾದ ಆಲಿಸಿದ ಬಳಿಕ ಜೀವಾವಧಿ ಶಿಕ್ಷೆಗೆ ಮಧ್ಯಂತರ ತಡೆ ನೀಡಿ, ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯ ವಿಧಿಸಿದ ಷರತ್ತುಗಳಂತೆ, 5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಶ್ಯೂರಿಟಿ ಸಲ್ಲಿಸಬೇಕು. ಜೊತೆಗೆ, ಧಾರವಾಡ ಜಿಲ್ಲೆಗೆ ತೆರಳಲು ಸಹ ಅನುಮತಿ ನೀಡಲಾಗಿದೆ.
ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಆದೇಶದಿಂದ ಅವರಿಗೆ ತಾತ್ಕಾಲಿಕ ಕಾನೂನು ರಿಲೀಫ್ ದೊರೆತಿದ್ದು, ಪ್ರಕರಣದ ಮುಂದಿನ ವಿಚಾರಣೆ ಹೈಕೋರ್ಟ್‌ನಲ್ಲಿ ಮುಂದುವರಿಯಲಿದೆ.

