ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವರು ಹಾಗೂ ಸಂಪುಟ ಸಹೋದ್ಯೋಗಿಗಳಿಗೆ ತಿಳಿಸಿರುವ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ವೇದಿಕೆ ಸಜ್ಜು ಮಾಡಿದ್ದಾರೆ.
ಮಧ್ಯಾಹ್ನ 2.30ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಅವರು, ಬಳಿಕ ಮಧ್ಯಾಹ್ನ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಅಧಿಕಾರ ಹಸ್ತಾಂತರದ ಚರ್ಚೆ ಮತ್ತು ಊಹಾಪೋಹಗಳಿಗೆ ಇದೀಗ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ.
ಈ ನಿರ್ಧಾರದಿಂದ ರಾಜ್ಯದಲ್ಲಿ ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿಯೊಂದಿಗೆ ನೂತನ ಸರ್ಕಾರ ರಚನೆಯಾಗುವ ಸಾಧ್ಯತೆಗಳು ಗಟ್ಟಿಯಾಗಿವೆ.
ನಾಯಕತ್ವ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳ ನಡುವೆಯೇ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಸಭೆ ನಡೆಸಿದರು.
ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯಲ್ಲಿ ಸಿದ್ದರಾಮಯ್ಯ ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ರಾಜಕೀಯದ ಮುಂದಿನ ಬೆಳವಣಿಗೆಗಳತ್ತ ಈಗ ಎಲ್ಲರ ಗಮನ ನೆಟ್ಟಿದೆ.

