ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣ ಸಂಬಂಧ ಸಿಐಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ.
ಪ್ರಕರಣದ ತನಿಖೆಯ ಭಾಗವಾಗಿ ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿಗೆ ಸಿಐಡಿ ನೋಟಿಸ್ ಜಾರಿ ಮಾಡಿದ್ದು, ನೇಮಕಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ.
ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ, ಅಧಿಸೂಚನೆ, ಪ್ರಶ್ನೆ ಪತ್ರಿಕೆ, ಒಎಂಆರ್ ಶೀಟ್, ಸಂದರ್ಶನ (ವೈವಾ) ವಿವರ ಸೇರಿದಂತೆ ಸಂಪೂರ್ಣ ದಾಖಲೆಗಳನ್ನು ಒದಗಿಸುವಂತೆ ಸಿಐಡಿ ಸೂಚಿಸಿದೆ.
ಪಶುವೈದ್ಯಾಧಿಕಾರಿ ಹುದ್ದೆಗಾಗಿ ₹80 ಲಕ್ಷಕ್ಕೆ ಬ್ರೋಕರ್‌ಗಳ ಮೂಲಕ ಡೀಲ್ ನಡೆದಿರುವುದಾಗಿ ಹೇಳಲಾದ ಆಡಿಯೋ ವೈರಲ್ ಆದ ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಸಾಕ್ಷ್ಯ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.
ಇದೇ ವೇಳೆ, ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿರುವ ಎಬಿವಿಪಿ ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದೆ.
ಆಗಸ್ಟ್ 4ರೊಳಗೆ ಪ್ರಕರಣವನ್ನು ಸಿಬಿಐಗೆ ವಹಿಸದಿದ್ದರೆ, ಆಗಸ್ಟ್ 5ರಂದು ರಾಜ್ಯಾದ್ಯಂತ ಪ್ರತಿಭಟನೆ ಹಾಗೂ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಎಬಿವಿಪಿ ಎಚ್ಚರಿಕೆ ನೀಡಿದೆ.

