ಬೆಂಗಳೂರು: ಬೆಂಗಳೂರು ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಬಿ ಕೇರ್ ಕೇಂದ್ರದಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ಕ್ಯಾಪ್‌ಜೆಮಿನಿ ಸಂಸ್ಥೆ ಸ್ಪಷ್ಟನೆ ನೀಡಿದೆ.
ಸಂಸ್ಥೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಮಕ್ಕಳ ಸುರಕ್ಷತೆ ಮತ್ತು ಯೋಗಕ್ಷೇಮವೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದೆ.
ಬೇಬಿ ಕೇರ್ ಕೇಂದ್ರವನ್ನು ಸಂಸ್ಥೆಯ ಬಾಹ್ಯ ಸೇವಾ ಪೂರೈಕೆದಾರ ಲಿಟಲ್ ಸ್ಕಾಲರ್ಸ್ ನಡೆಸುತ್ತಿದ್ದು, ಘಟನೆ ಕುರಿತು ತನಿಖೆ ನಡೆಯುತ್ತಿದೆ ಎಂದು ಸಂಸ್ಥೆ ಹೇಳಿದೆ. ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ ಎಂದೂ ಸ್ಪಷ್ಟಪಡಿಸಿದೆ.
ತನಿಖೆ ಪೂರ್ಣಗೊಳ್ಳುವವರೆಗೂ ಡೇ ಕೇರ್ ಕೇಂದ್ರವನ್ನು ತಾತ್ಕಾಲಿಕವಾಗಿ ಮುಚ್ಚಲಾಗುತ್ತದೆ ಎಂದು ತಿಳಿಸಲಾಗಿದ್ದು, ಸಂಬಂಧಿಸಿದ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಅವಕಾಶ ನೀಡಲಾಗಿದೆ.
ಭಾರತದಾದ್ಯಂತ ಇರುವ ಎಲ್ಲಾ ಕಚೇರಿಗಳಲ್ಲಿನ ಡೇ ಕೇರ್ ಸೇವಾ ಪೂರೈಕೆದಾರರ ವ್ಯವಸ್ಥೆಯನ್ನು ಮರುಪರಿಶೀಲಿಸಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಪ್ರಕರಣದಲ್ಲಿ ಈಗಾಗಲೇ ಹೆಚ್‌ಎಎಲ್ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಮಕ್ಕಳಿಗೆ ಕಿರುಕುಳ ನೀಡಿದ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

