ಬೆಂಗಳೂರು: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದು, ಈ ಕುರಿತು ವಿಡಿಯೊವೊಂದನ್ನು ಬಿಡುಗಡೆ ಮಾಡಿ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಿದ್ದಾರೆ.
ಮಸೀದಿಗಳಲ್ಲಿ ಅಕ್ರಮವಾಗಿ ಎಸ್‌ಐಆರ್ (Special Intensive Revision) ಪ್ರಕ್ರಿಯೆ ನಡೆಸಲಾಗುತ್ತಿದ್ದು, ಅಕ್ರಮ ವಲಸಿಗರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಪ್ರಕ್ರಿಯೆಗೆ ರಾಜ್ಯ ಸರ್ಕಾರ, ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲವಿದೆ ಎಂದು ಶೋಭಾ ಕರಂದ್ಲಾಜೆ ದೂರಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ತೆರಳಿ ಅರ್ಹ ಮತದಾರರಿಂದ ಅರ್ಜಿಗಳನ್ನು ಭರ್ತಿ ಮಾಡಿಸಬೇಕು. ಆದರೆ ನಿಯಮ ಉಲ್ಲಂಘಿಸಿ ಮಸೀದಿಗಳಲ್ಲಿ ಈ ಪ್ರಕ್ರಿಯೆ ನಡೆಸುತ್ತಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ವಿಡಿಯೊ ಸಾಕ್ಷ್ಯವನ್ನು ಬಿಡುಗಡೆ ಮಾಡಿರುವ ಶೋಭಾ ಕರಂದ್ಲಾಜೆ, ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಿದ್ದು, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

