ಧಾರವಾಡ: ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆಗೆ ಮತ್ತೊಂದು ಹೆಜ್ಜೆ ಇಡಲಾಗಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೂ ಇನ್ಮುಂದೆ ಕೃತಕ ಬುದ್ಧಿಮತ್ತೆ (AI) ಶಿಕ್ಷಣ ಲಭ್ಯವಾಗಲಿದೆ.
ಖಾಸಗಿ ಶಾಲೆಗಳಿಗೆ ಸೀಮಿತವಾಗಿದ್ದ AI ತರಗತಿಗಳನ್ನು ಇದೀಗ ಸರ್ಕಾರಿ ಪ್ರೌಢಶಾಲೆಗಳಿಗೂ ವಿಸ್ತರಿಸಲಾಗುತ್ತಿದೆ.
ಸಮಗ್ರ ಶಿಕ್ಷಣ ಕರ್ನಾಟಕ (SSK) ಯೋಜನೆಯಡಿ ಧಾರವಾಡ ಜಿಲ್ಲೆಯ 56 ಸರ್ಕಾರಿ ಪ್ರೌಢಶಾಲೆಗಳಲ್ಲಿ AI ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು (NSQF) ಅಡಿಯಲ್ಲಿ ಈ ವಿಶೇಷ ತರಗತಿಗಳನ್ನು ನಡೆಸಲಾಗುತ್ತದೆ.
ಈಗಾಗಲೇ ಜಿಲ್ಲೆಯ 56 ಶಾಲೆಗಳಿಗೆ AI ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ವಿಶೇಷ ತರಬೇತಿ ನೀಡಿ ತರಗತಿಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ಶಾಲೆಗೆ ಒಬ್ಬ AI ಅತಿಥಿ ಶಿಕ್ಷಕರನ್ನು ತಿಂಗಳಿಗೆ ₹20 ಸಾವಿರ ಗೌರವಧನದ ಆಧಾರದ ಮೇಲೆ ನೇಮಕ ಮಾಡಲಾಗಿದೆ.
ಧಾರವಾಡ ಜಿಲ್ಲೆಯ ಸಂಶಿ, ಕುಸುಗಲ್ಲ, ಕೋಳಿವಾಡ, ನಲವಡಿ, ಚಿಕ್ಕಮಲ್ಲಿಗವಾಡ, ಕುರುವಿನಕೊಪ್ಪ, ಮಂಟೂರ, ಚಿಲಕವಾಡ ಸೇರಿದಂತೆ ಹಲವು ಸರ್ಕಾರಿ ಶಾಲೆಗಳಲ್ಲಿ ಈ ಯೋಜನೆ ಜಾರಿಯಾಗಲಿದೆ.
ಇದಲ್ಲದೇ, ಬ್ಯೂಟಿ ಅಂಡ್ ವೆಲ್‌ನೆಸ್, ರಿಟೇಲ್ ಹಾಗೂ ಅಪೆರಲ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ 81 ಶಾಲೆಗಳಲ್ಲಿ ವಿಷಯ ಬದಲಾವಣೆ ಮಾಡಿ AI ವಿಷಯವನ್ನು ಬೋಧಿಸಲು ನಿರ್ಧರಿಸಲಾಗಿದೆ.
ವೈದ್ಯಕೀಯ, ಕೃಷಿ, ಕೈಗಾರಿಕೆ, ಬ್ಯಾಂಕಿಂಗ್ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ AI ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಇದರ ಅರಿವು ಮೂಡಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ.
AI ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಜ್ಞಾನ, ತಾರ್ಕಿಕ ಚಿಂತನೆ, ಸಮಸ್ಯೆ ಪರಿಹಾರ ಸಾಮರ್ಥ್ಯ ಹಾಗೂ ಭವಿಷ್ಯದ ಉದ್ಯೋಗಗಳಿಗೆ ಅಗತ್ಯವಿರುವ ಕೌಶಲಗಳನ್ನು ಬೆಳೆಸುವ ಗುರಿ ಹೊಂದಲಾಗಿದೆ.
ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ನಡುವಿನ ಡಿಜಿಟಲ್ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಆರಂಭವಾಗುತ್ತಿರುವ AI ತರಗತಿಗಳು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲಾಗುವ ನಿರೀಕ್ಷೆ ಇದೆ.

