Dailyhunt Logo
  • Light mode
    Follow system
    Dark mode
    • Play Story
    • App Story
ವಯನಾಡ್‌ನಲ್ಲಿ ಭೀಕರ ಭೂಕುಸಿತ; 3 ಮಂದಿ ಸಾವು, ಐವರು ನಾಪತ್ತೆ, ರಕ್ಷಣಾ ಕಾರ್ಯ ಮುಂದುವರಿಕೆ!

ವಯನಾಡ್‌ನಲ್ಲಿ ಭೀಕರ ಭೂಕುಸಿತ; 3 ಮಂದಿ ಸಾವು, ಐವರು ನಾಪತ್ತೆ, ರಕ್ಷಣಾ ಕಾರ್ಯ ಮುಂದುವರಿಕೆ!

AIN Kannada 4 months ago

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಮೃತಪಟ್ಟಿದ್ದು, ಐವರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಆನೆಕಂಪೋಯಿಲ್-ಮೇಪ್ಪಾಡಿ ಸುರಂಗ ರಸ್ತೆ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ.

ಭೂಕುಸಿತದಿಂದ ಒಟ್ಟು 18 ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪೈಕಿ ಮೂವರು ಮೃತಪಟ್ಟಿದ್ದು, 10 ಮಂದಿಯನ್ನು ಮೇಪ್ಪಾಡಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಣ್ಣಿನಡಿ ಸಿಲುಕಿರುವ ಐವರಿಗಾಗಿ ರಕ್ಷಣಾ ತಂಡಗಳು ತೀವ್ರ ಶೋಧ ಕಾರ್ಯ ನಡೆಸುತ್ತಿವೆ.

ಮುನ್ನೆಚ್ಚರಿಕೆ ಕ್ರಮವಾಗಿ ಭೂಕುಸಿತ ಪೀಡಿತ ಪ್ರದೇಶದ ಸುತ್ತಮುತ್ತ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರು ಇರಲಿಲ್ಲ

ಘಟನೆ ಸಂಭವಿಸಿದ ವೇಳೆ ರಸ್ತೆ ಕಾಮಗಾರಿ ಸ್ಥಳದಲ್ಲಿ ಯಾವುದೇ ಕಾರ್ಮಿಕರು ಕೆಲಸ ಮಾಡುತ್ತಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣ್ಣಿನಡಿ ಸಿಲುಕಿರುವವರು ಎಂಜಿನಿಯರ್‌ಗಳು ಮತ್ತು ಭದ್ರತಾ ಸಿಬ್ಬಂದಿಯಾಗಿರಬಹುದು ಎಂದು ಶಂಕಿಸಲಾಗಿದೆ. ಒಂದು ವೇಳೆ ಆ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಸ್ಥಳದಲ್ಲಿದ್ದರೆ, ದುರಂತದ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿತ್ತು ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನದಿಗೆ ಬಿದ್ದ ಖಾಸಗಿ ಬಸ್

ಭೂಕುಸಿತದ ರಭಸಕ್ಕೆ ಕಾರ್ಮಿಕರನ್ನು ಕರೆದುಕೊಂಡು ಬರಲು ಬಳಸಲಾಗುತ್ತಿದ್ದ ಖಾಸಗಿ ಬಸ್‌ವೊಂದು ಹತ್ತಿರದ ನದಿಗೆ ಉರುಳಿದೆ. ಬಸ್‌ನ ಅರ್ಧ ಭಾಗ ನೀರಿನಲ್ಲಿ ಮುಳುಗಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ರಕ್ಷಣಾ ಕಾರ್ಯ ಚುರುಕು

ಭಾರೀ ಮಳೆ ಹಾಗೂ ಮಣ್ಣಿನ ಕುಸಿತದ ನಡುವೆಯೂ ರಕ್ಷಣಾ ತಂಡಗಳು ನಾಪತ್ತೆಯಾದವರಿಗಾಗಿ ಹುಡುಕಾಟ ಮುಂದುವರಿಸಿವೆ. ಸ್ಥಳೀಯ ಆಡಳಿತ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿವೆ.

ವಯನಾಡ್‌ನಲ್ಲಿ ಕಳೆದ ವರ್ಷ ಸಂಭವಿಸಿದ್ದ ಭೀಕರ ಭೂಕುಸಿತದ ಬಳಿಕ ಮತ್ತೆ ಇಂತಹ ಘಟನೆ ನಡೆದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News