ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ಹಂದಿಜ್ವರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ.
ಜೂನ್ 8ರಂದು ಅನಾರೋಗ್ಯಕ್ಕೆ ಒಳಗಾದ ರಾಜು ಮಂಜಗೌಡ ಅವರನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿರಸಿಯ ಮಾರಿಕಾಂಬಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕ ಮೂಡಿಸಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜ್ವರ, ಕೆಮ್ಮು, ನೆಗಡಿ, ಮೈಕೈ ನೋವು, ಗಂಟಲು ನೋವು, ಉಸಿರಾಟದ ತೊಂದರೆ ಅಥವಾ ಅತಿಯಾದ ಸುಸ್ತು ಕಂಡುಬಂದಲ್ಲಿ ಕೂಡಲೇ ಸಮೀಪದ ಸರ್ಕಾರಿ ಅಥವಾ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ತೀವ್ರ ಉಸಿರಾಟದ ತೊಂದರೆ, ಎದೆನೋವು, ನಿರ್ಜಲೀಕರಣ ಅಥವಾ ಗೊಂದಲದ ಲಕ್ಷಣಗಳು ಕಂಡುಬಂದರೆ ತುರ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ವೈದ್ಯರು ತಿಳಿಸಿದ್ದಾರೆ.
ಹಂದಿಜ್ವರವು ಹೆಚ್1ಎನ್1 ವೈರಸ್‌ನಿಂದ ಉಂಟಾಗುವ ಸೋಂಕು ರೋಗವಾಗಿದೆ. ಸೋಂಕಿತ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ವೈರಸ್ ಗಾಳಿಯಲ್ಲಿ ಹರಡಬಹುದು. ಅಲ್ಲದೇ ಸೋಂಕಿತ ವ್ಯಕ್ತಿ ಮುಟ್ಟಿದ ವಸ್ತುಗಳನ್ನು ಸ್ಪರ್ಶಿಸಿ ನಂತರ ಕಣ್ಣು, ಮೂಗು ಅಥವಾ ಬಾಯಿಯನ್ನು ಮುಟ್ಟಿಕೊಳ್ಳುವುದರಿಂದಲೂ ಸೋಂಕು ಹರಡುವ ಸಾಧ್ಯತೆ ಇರುತ್ತದೆ.
ಆದ್ದರಿಂದ ವೈಯಕ್ತಿಕ ಸ್ವಚ್ಛತೆ ಕಾಪಾಡುವುದು, ಕೈಗಳನ್ನು ಆಗಾಗ ತೊಳೆಯುವುದು, ಜ್ವರ ಅಥವಾ ಶೀತದ ಲಕ್ಷಣಗಳಿರುವವರಿಂದ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸುವ ಮೂಲಕ ಹೆಚ್1ಎನ್1 ಸೋಂಕಿನಿಂದ ದೂರ ಉಳಿಯಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

