
ಉತ್ತರಪ್ರದೇಶ : ಬಿಜೆಪಿ ಪರಿಶಿಷ್ಟ ಮೋರ್ಚಾದ ರಾಜ್ಯಾಧ್ಯಕ್ಷ ಮತ್ತು ಸಂಸದ ಕೌಶಲ್ ಕಿಶೋರ್ ಮಗನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಮಡಿಯಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಸದ ಕೌಶಾಲ್ ಕಿಶೋರ್ ಮಗ 30 ವರ್ಷದ ಆಯುಷ್ ಮೇಲೆ ತಡ ರಾತ್ರಿ ಗುಂಡಿನ ದಾಳಿ ನಡೆದಿದೆ.
ರಾತ್ರಿ ಸುಮಾರು 2.45ಕ್ಕೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಆಯುಷ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಪರಿಣಾಮ ಆಯುಷ್ ಬಲಗೈಗೆ ಗುಂಡು ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದನು. ಸ್ಥಳೀಯರ ನೆರವಿನಿಂದ ಆಯುಷ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಸುದ್ದಿ ತಿಳಿದ ಬಿಜೆಪಿ ನಾಯಕ ಕೌಶಲ್ ಮತ್ತು ಉನ್ನತ ಅಧಿಕಾರಿಗಳು ಆಸ್ಪತ್ರೆಗೆ ದೌಡಾಯಿಸಿದರು.
ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಯುಷ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿರುವ ಆಯುಷ್ ಬಲಗೈಗೆ ಗುಂಡುಗಳು ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತು ಈಗಾಗಲೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಗಳ ಮೂಲಕ ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.