
ಪಣಜಿ,ಅ.23-ಮುಂದಿನ ವರ್ಷ ಚುನಾವಣೆ ನಡೆಯಲಿರುವ ಗೋವಾದಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸಲು ಟಿಎಂಸಿ ಪಕ್ಷದೊಂದಿಗೆ ಕೈ ಜೋಡಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಿಧ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಗೋವಾ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿರುವ ಟಿಎಂಸಿ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಮಮತಾ ಅವರು ಇದೇ 28 ರಂದು ಗೋವಾಗೆ ಭೇಟಿ ನೀಡಲಿದ್ದಾರೆ.
ಕಳೆದ 10 ವರ್ಷಗಳಿಂದ ಹೊಡೆದು ಆಳುವ ನೀತಿ ಅನುಸರಿಸುತ್ತಿರುವ ಬಿಜೆಪಿ ಸರ್ಕಾರವನ್ನು ಮಣಿಸಬೇಕಾದರೆ ಗೋವಾ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು ಟಿಎಂಸಿಯೊಂದಿಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಮುಂದಿನ ಸರ್ಕಾರ ಟಿಎಂಸಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬರಲಿದ್ದು, ಗೋವಾದ ಹೊಸ ಆಶಾಕಿರಣವಾಗಿ ನಮ್ಮ ಪಕ್ಷ ಪರಿವರ್ತನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗೋವಾದ ಮಾಜಿ ಮುಖ್ಯಮಂತ್ರಿ ಲೂಜಿನೋ ಫಲೇರೋ ಅವರು ಇತ್ತಿಚೆಗೆ ಟಿಎಂಸಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.