Dailyhunt Logo
  • Light mode
    Follow system
    Dark mode
    • Play Story
    • App Story
ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

Guaranteenews 2 weeks ago

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಹಲವು ಸಚಿವಾಕಾಂಕ್ಷಿಗಳಿಗೆ ಸಂಪುಟದಲ್ಲಿ ಸ್ಥಾನ ಸಿಗದಿರುವುದು ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಅದರ ಪರಿಣಾಮವಾಗಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಮತ್ತು ಬಂದ್‌ಗಳಿಗೆ ಕರೆ ನೀಡಲಾಗುತ್ತಿದೆ.

ಇದೇ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ದೊರೆಯದಿರುವುದನ್ನು ಖಂಡಿಸಿ ಇಂದು ಬಂಗಾರಪೇಟೆ ಬಂದ್‌ಗೆ ಕರೆ ನೀಡಲಾಗಿದೆ.

ಬಂಗಾರಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಂದ್ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಪೂರ್ಣ ಬಂದ್ ಆಚರಿಸಲು ತೀರ್ಮಾನಿಸಲಾಗಿದ್ದು, ವ್ಯಾಪಾರ ವಹಿವಾಟು, ಸಾರಿಗೆ ಸೇರಿದಂತೆ ವಿವಿಧ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು 2013, 2018 ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರು ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ. ದೀರ್ಘಕಾಲ ಪಕ್ಷದ ಪರವಾಗಿ ದುಡಿದಿದ್ದರೂ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ಅನ್ಯಾಯ ಎಂದು ಬೆಂಬಲಿಗರು ಆರೋಪಿಸಿದ್ದಾರೆ. ಕೋಲಾರ-ಚಿಕ್ಕಬಳ್ಳಾಪುರ ಭಾಗದ ನಾಲ್ವರು ಕಾಂಗ್ರೆಸ್ ಶಾಸಕರಿದ್ದರೂ ಯಾರಿಗೂ ಸಚಿವ ಸ್ಥಾನ ನೀಡದಿರುವುದು ಜಿಲ್ಲೆಯ ಜನತೆಗೆ ನಿರಾಸೆ ತಂದಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಬಂದ್‌ಗೆ ದಲಿತ ಸಂಘಟನೆಗಳು, ವರ್ತಕರ ಸಂಘ, ಆಟೋ ಚಾಲಕರ ಸಂಘ, ರೈತ ಸಂಘ ಸೇರಿದಂತೆ ಹಲವು ಸಾಮಾಜಿಕ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಸ್ ಹಾಗೂ ಆಟೋ ಸಂಚಾರವೂ ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚುವ ಸಾಧ್ಯತೆಯಿದೆ. ಸರ್ಕಾರಿ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳು ಸ್ಥಳೀಯ ಪರಿಸ್ಥಿತಿಯನ್ನು ಅವಲಂಬಿಸಿ ಕಾರ್ಯನಿರ್ವಹಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಿವೆ.

ಇಂದು ಬೆಳಗ್ಗೆ 11 ಗಂಟೆಗೆ ಬಂಗಾರಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಾಗೂ ರ‍್ಯಾಲಿ ನಡೆಸಲು ಸಂಘಟಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದ್ದು, ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸುವ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.

ಇದರ ನಡುವೆಯೇ ಹಾವೇರಿ ಜಿಲ್ಲೆಯ ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರೂ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಇನ್ನೂ ಸಂಪೂರ್ಣ ಶಮನವಾಗಿಲ್ಲ ಎಂಬುದು ಸ್ಪಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಹೈಕಮಾಂಡ್ ಅಸಮಾಧಾನಿತ ಶಾಸಕರನ್ನು ಹೇಗೆ ಮನವೊಲಿಸುತ್ತದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Guaranteenews