Dailyhunt Logo
  • Light mode
    Follow system
    Dark mode
    • Play Story
    • App Story
ಇಂದು CM ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

ಇಂದು CM ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

Guaranteenews 2 hrs ago

CM ಡಿ ಕೆ ಶಿವಕುಮಾರ್ & ಮಾಜಿ ಸಿಎಂ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ರಾಜ್ಯ ಕಾಂಗ್ರೆಸ್‌ನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿ ಕುತೂಹಲ ಮೂಡಿಸಿದೆ. ಇಬ್ಬರೂ ನಾಯಕರು ಬೆಳಗ್ಗೆ 10:30ರ ಸುಮಾರಿಗೆ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದ್ದು, ಅಲ್ಲಿ ನಡೆಯಲಿರುವ ಮಹತ್ವದ ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಸಿಡಬ್ಲ್ಯುಸಿ ಸಭೆ ಬಳಿಕ CM ಅವರು ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ನಾಯಕರನ್ನು ಭೇಟಿಯಾಗುವ ಸಾಧ್ಯತೆಯೂ ಇದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ಹಾಗೂ ಅದರಲ್ಲಿ ಕೆಲವು ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿರುವ ವಿಚಾರ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ಸಚಿವ ಸಂಪುಟ ವಿಸ್ತರಣೆ ವೇಳೆ ತಮ್ಮ ಆಪ್ತ ಶಾಸಕರಿಗೆ ಸೂಕ್ತ ಆದ್ಯತೆ ಸಿಗಲಿಲ್ಲ ಎಂಬ ಅಸಮಾಧಾನ ಸಿದ್ದರಾಮಯ್ಯ ಅವರಲ್ಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸಚಿವ ಸ್ಥಾನಕ್ಕೆ ಅರ್ಹರಾಗಿರುವ ತಮ್ಮ ಬೆಂಬಲಿಗ ಶಾಸಕರಿಗೆ ಅವಕಾಶ ನೀಡಬೇಕಿತ್ತು ಎಂಬ ಅಭಿಪ್ರಾಯವನ್ನು ಹೈಕಮಾಂಡ್ ನಾಯಕರ ಮುಂದೆ ಪ್ರಸ್ತಾಪಿಸುವ ಸಾಧ್ಯತೆ ಇದೆ.

ತಮ್ಮ ಆಪ್ತ ಶಾಸಕರಿಗೆ ಸಚಿವ ಸ್ಥಾನ ಸಿಗದಿರುವುದರಿಂದ ಕ್ಷೇತ್ರವಾರು ಹಾಗೂ ರಾಜಕೀಯವಾಗಿ ಉಂಟಾಗಿರುವ ಅಸಮಾಧಾನದ ಬಗ್ಗೆಯೂ ಸಿದ್ದರಾಮಯ್ಯ ಅವರು ಹೈಕಮಾಂಡ್ ಗಮನಕ್ಕೆ ತರಬಹುದು ಎನ್ನಲಾಗಿದೆ. ಸಂಪುಟ ರಚನೆ ವೇಳೆ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನ ಕಾಯ್ದುಕೊಳ್ಳುವ ಅಗತ್ಯವಿತ್ತು ಎಂಬ ವಿಚಾರವನ್ನೂ ಅವರು ಚರ್ಚಿಸುವ ಸಾಧ್ಯತೆಯಿದೆ.

ಆಪ್ತರ ಪರ ಸಿದ್ದರಾಮಯ್ಯ ಬ್ಯಾಟಿಂಗ್?

ಸಚಿವ ಸ್ಥಾನಕ್ಕೆ ಅರ್ಹರಾಗಿರುವ ತಮ್ಮ ಆಪ್ತ ಶಾಸಕರ ಪರವಾಗಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ ವಾದ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಂಪುಟದಲ್ಲಿ ಸ್ಥಾನ ಸಿಗದಿರುವ ಶಾಸಕರ ಅಸಮಾಧಾನ ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಹಾಗೂ ಸರ್ಕಾರದ ಕಾರ್ಯವೈಖರಿಯ ಮೇಲೂ ಪರಿಣಾಮ ಬೀರಬಹುದು ಎಂಬ ಆತಂಕವೂ ಇದೆ.

ಇದರ ಜೊತೆಗೆ, ಶಾಸಕರ ಅಸಮಾಧಾನ ಮುಂದಿನ ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಚುನಾವಣಾ ರಾಜಕೀಯದ ಮೇಲೆ ಪರಿಣಾಮ ಬೀರದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕಾಗಿದೆ ಎಂಬ ಅಭಿಪ್ರಾಯವನ್ನು ಸಿದ್ದರಾಮಯ್ಯ ಅವರು ಹೈಕಮಾಂಡ್‌ಗೆ ತಿಳಿಸುವ ಸಾಧ್ಯತೆಯಿದೆ.

ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನೊಳಗೆ ಉಂಟಾಗಿರುವ ಬೆಳವಣಿಗೆಗಳು, ಸಚಿವ ಸ್ಥಾನ ವಂಚಿತ ಶಾಸಕರ ಅಸಮಾಧಾನ ಹಾಗೂ ತಮ್ಮ ಆಪ್ತರ ರಾಜಕೀಯ ಭವಿಷ್ಯದ ಕುರಿತು ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಬಹುದು ಎನ್ನಲಾಗಿದೆ.

ದೆಹಲಿಯಲ್ಲಿ ನಡೆಯಲಿರುವ ಸಿಡಬ್ಲ್ಯುಸಿ ಸಭೆ ಬಳಿಕ ನಡೆಯುವ ನಾಯಕರ ಭೇಟಿಗಳು ರಾಜ್ಯ ಕಾಂಗ್ರೆಸ್‌ನ ಮುಂದಿನ ರಾಜಕೀಯ ನಡೆಗೆ ಮಹತ್ವದ ಸೂಚನೆ ನೀಡುವ ಸಾಧ್ಯತೆಯಿದೆ. ಹೀಗಾಗಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದತ್ತ ರಾಜ್ಯ ರಾಜಕೀಯ ವಲಯದ ಗಮನ ನೆಟ್ಟಿದೆ.

Dailyhunt
Disclaimer: This content has not been generated, created or edited by Dailyhunt. Publisher: Guaranteenews