ಬೆಂಗಳೂರು, ಸೆಪ್ಟೆಂಬರ್ 22: ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರಿಯುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ತಿಳಿಸಿದೆ.
ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಸೆಪ್ಟೆಂಬರ್ 22ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನಲ್ಲೂ ಮಳೆ ಅಬ್ಬರ
ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಬಹುದು. ಬೆಂಗಳೂರಿನಲ್ಲೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.
ಸೆ.23ಕ್ಕೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
ಸೆಪ್ಟೆಂಬರ್ 23ರಂದು ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಉತ್ತರ ಕನ್ನಡದಲ್ಲೂ ಭಾರಿ ಮಳೆಯ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯವರೆಗೆ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಬಹುದು.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಚಿತ್ರದುರ್ಗ, ಹಾಸನ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಭಾರಿ ಮಳೆಯ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಸೆ.23-24ರಂದು ಆರೆಂಜ್ ಅಲರ್ಟ್
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಕೂಡ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 23 ಮತ್ತು 24ರಂದು ಭಾರಿ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಗುಡುಗು-ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಭಾರಿ ಮಳೆಯಾಗುವ ಪ್ರದೇಶಗಳಲ್ಲಿ ಅನಗತ್ಯವಾಗಿ ಪ್ರಯಾಣಿಸದಿರುವುದು ಹಾಗೂ ತಗ್ಗು ಪ್ರದೇಶಗಳಲ್ಲಿರುವವರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಎಲ್ಲೆಲ್ಲಿ ಎಷ್ಟು ಮಳೆ?
ರಾಜ್ಯದಲ್ಲಿ ಈಗಾಗಲೇ ಹಲವು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲವಾಗಿತ್ತು. ಆದರೂ ಉತ್ತರ ಒಳನಾಡಿನ ಹಲವು ಪ್ರದೇಶಗಳು, ಕರಾವಳಿಯ ಕೆಲವು ಭಾಗಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.
ಸೋಮವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಗದಗ ಜಿಲ್ಲೆಯ ನರಗುಂದದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ 5 ಸೆಂ.ಮೀ, ವಿಜಯನಗರ ಜಿಲ್ಲೆಯ ಹೊಸಹಳ್ಳಿಯಲ್ಲಿ 4 ಸೆಂ.ಮೀ ಹಾಗೂ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ.
ಮುಂದಿನ ಎರಡು ದಿನಗಳಲ್ಲೂ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಜನರು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಗಮನಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ.

