ಧಾರವಾಡ, 05 ಆಗಸ್ಟ್ (ಹಿ.ಸ.):
ಆಯಂಕರ್:ರೈತರಿಗೆ ಸರ್ಕಾರದ ಯೋಜನೆಗಳ ಮಾಹಿತಿ ಸಮರ್ಪಕವಾಗಿ ತಲುಪಿಸುವಂತೆ ಹಾಗೂ ರಸಗೊಬ್ಬರ, ಬಿತ್ತನೆ ಬೀಜ ವಿತರಣೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸೂಚಿಸಿದರು.
ಕಲಘಟಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಕೇಂದ್ರಗಳು ಮತ್ತು ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಸೂಚಿಸಿದರು.
ರಸಗೊಬ್ಬರವನ್ನು ನಿಗದಿತ ದರದಲ್ಲೇ ವಿತರಿಸಬೇಕು, ಮಧ್ಯವರ್ತಿಗಳ ಹಾವಳಿ ತಡೆಗಟ್ಟಬೇಕು ಹಾಗೂ ಬೆಳೆ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಿ, ಬೆಳೆ ದರ್ಶಕ ಆಯಪ್‌ನಲ್ಲಿ ನಿಖರ ಮಾಹಿತಿ ದಾಖಲಿಸಬೇಕು ಎಂದು ಹೇಳಿದರು.
ಕಡಿಮೆ ಮಳೆಯ ಹಿನ್ನೆಲೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಚಿವರು, ಕಲಘಟಗಿ ತಾಲೂಕಿನ 16 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಂದಿದ್ದು, ಬೋರವೆಲ್ ಹಾಗೂ ಇತರ ವ್ಯವಸ್ಥೆಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.
ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಆದ್ಯತೆ ನೀಡಬೇಕು, ಶಿಥಿಲ ಕಟ್ಟಡಗಳಲ್ಲಿ ಮಕ್ಕಳನ್ನು ಕೂರಿಸಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರೈತರು ಅಡಿಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳತ್ತ ಗಮನಹರಿಸುವಂತೆ ಜಾಗೃತಿ ಮೂಡಿಸಬೇಕೆಂದೂ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.

