Dailyhunt Logo
  • Light mode
    Follow system
    Dark mode
    • Play Story
    • App Story
ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಬ್ಬಿನ ಬೆಳೆ ಬಲಿ?

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಬ್ಬಿನ ಬೆಳೆ ಬಲಿ?

ಬಾಗಲಕೋಟೆ, 07 ಮೇ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ

ಬಾದಾಮಿ ತಾಲೂಕಿನ ಮತ್ತಿಕಟ್ಟಿ ಗ್ರಾಮದಲ್ಲಿ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಸುಟ್ಟು ಭಸ್ಮವಾದ ಘಟನೆ ನಡೆದಿದ್ದು, ರೈತರು ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಘಟನೆಯಿಂದ ರೈತ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದಿಂದ ತಕ್ಷಣ ಪರಿಹಾರ ನೀಡುವಂತೆ ಆಗ್ರಹ ವ್ಯಕ್ತವಾಗಿದೆ.

ಗ್ರಾಮದ ಹೊರವಲಯದಲ್ಲಿರುವ ಕೃಷಿ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಏಕಾಏಕಿ ಬೆಂಕಿಗಾಹುತಿಯಾದ ಪರಿಣಾಮ ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿತು. ಬಿಸಿಲಿನ ತಾಪಮಾನ ಹಾಗೂ ಗಾಳಿಯ ವೇಗ ಹೆಚ್ಚಿದ್ದರಿಂದ ಬೆಂಕಿ ನಿಯಂತ್ರಣಕ್ಕೆ ತರುವಲ್ಲಿ ರೈತರು ಮತ್ತು ಗ್ರಾಮಸ್ಥರು ಸಾಕಷ್ಟು ಹರಸಾಹಸ ಪಟ್ಟರು. ಸ್ಥಳೀಯರು ನೀರಿನ ಟ್ಯಾಂಕರ್ಗಳು ಹಾಗೂ ಕೃಷಿ ಮೋಟಾರ್ಗಳ ಸಹಾಯದಿಂದ ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಆಗಾಗಲೇ ಬಹುಪಾಲು ಬೆಳೆ ಸಂಪೂರ್ಣ ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಳಿಕ ರೈತರು ಹೆಸ್ಕಾಂ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಜಮೀನಿನ ಪಕ್ಕದಿಂದ ಹಾದುಹೋಗಿರುವ ವಿದ್ಯುತ್ ತಂತಿಗಳು ಸಡಿಲವಾಗಿ ಕಂಗೊಳಿಸುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ತಂತಿಗಳ ಸ್ಪಾರ್ಕ್ನಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಹಲವು ಬಾರಿ ದೂರು ನೀಡಿದ್ದರೂ ಹೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ರೈತರು ದೂರಿದ್ದಾರೆ.

ಕಬ್ಬಿನ ಬೆಳೆ ಕಟಾವಿಗೆ ಸಿದ್ಧವಾಗಿದ್ದ ಸಮಯದಲ್ಲೇ ಅವಘಡ ಸಂಭವಿಸಿರುವುದರಿಂದ ರೈತರಿಗೆ ಭಾರೀ ನಷ್ಟ ಉಂಟಾಗಿದೆ. ರಸಗೊಬ್ಬರ, ಕೂಲಿ ಹಾಗೂ ನೀರಾವರಿ ವೆಚ್ಚ ಸೇರಿ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಲಾಗಿತ್ತು. ಇದೀಗ ಸಂಪೂರ್ಣ ಬೆಳೆ ಹಾನಿಯಾಗಿರುವುದರಿಂದ ಸಾಲದ ಹೊರೆ ಹೆಚ್ಚಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳೆ ಹಾನಿಯ ಕುರಿತು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ನಿರ್ಲಕ್ಷ್ಯ ತೋರಿದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / jyothi deshpande

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada