ಬೆಂಗಳೂರು, 25 ಮೇ (ಹಿ.ಸ.) :
ಆಯಂಕರ್ : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತು ನಡೆಯುತ್ತಿರುವ ತೀವ್ರ ಚರ್ಚೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಿಂದ ದೆಹಲಿಗೆ ಆಗಮಿಸುವಂತೆ ಕರೆ ಬಂದಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಹಾಗೂ ಊಹಾಪೋಹಗಳಿಗೆ ಕಾರಣವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ದೆಹಲಿ ಪ್ರವಾಸದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ದೂರವಾಣಿ ಕರೆ ಮಾಡಿ ದೆಹಲಿಗೆ ಆಗಮಿಸುವಂತೆ ತಿಳಿಸಿದ್ದು ಸಂಜೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಹತ್ವದ ರಾಜಕೀಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಭಾಗವಹಿಸಲಿದ್ದಾರೆ.
ಸಭೆಯಲ್ಲಿ ರಾಜ್ಯದ ರಾಜಕೀಯ ಪರಿಸ್ಥಿತಿ, ರಾಜ್ಯ ಸಭಾ ಚುನಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ, ಅಧಿಕಾರ ಹಸ್ತಾಂತರದ ವಿಷಯಗಳು ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕ ಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆಗಳೂ ಇವೆ.
ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿಗೆ ಹೈಕಮಾಂಡ್ ಕರೆ ಕುರಿತು ಊಹಾಪೋಹಗಳಿಗೆ ಹೆಚ್ಚು ಮಹತ್ವ ನೀಡಬಾರದು ರಾಜ್ಯ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭಿಪ್ರಾಯ ಸಂಗ್ರಹಕ್ಕಾಗಿ ಸಭೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.

