Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

ಬೆಂಗಳೂರು, 03 ಜೂನ್ (ಹಿ.ಸ.) :

ಯಂಕರ್ : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ವರ್ಷಗಳ ರಾಜಕೀಯ ಹೋರಾಟ ಮತ್ತು ನಿರೀಕ್ಷೆಗಳ ಬಳಿಕ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಡಿ.ಕೆ. ಶಿವಕುಮಾರ್ ಅವರು ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದು ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಹೊಸ ನಾಯಕತ್ವದ ಅಧ್ಯಾಯ ಆರಂಭಗೊಂಡಿದೆ.

ಇದೇ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಸರ್ಕಾರದ ಎರಡನೇ ಪ್ರಮುಖ ಸ್ಥಾನವನ್ನು ಅಲಂಕರಿಸಿದರು.

ನೂತನ ಸರ್ಕಾರದ ಮೊದಲ ಹಂತದ ಸಚಿವ ಸಂಪುಟದಲ್ಲಿ ಒಟ್ಟು 12 ಮಂದಿ ಸಚಿವರು ಸ್ಥಾನ ಪಡೆದಿದ್ದಾರೆ. ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಡಾ. ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಡಾ. ಶರಣ ಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಬಹುತೇಕ ಹಿರಿಯ ನಾಯಕರಿಗೆ ಡಿ.ಕೆ. ಶಿವಕುಮಾರ್ ಸಂಪುಟದಲ್ಲೂ ಅವಕಾಶ ನೀಡಲಾಗಿದೆ. ಅನುಭವಿಗಳ ಜೊತೆಗೆ ಹೊಸ ಮುಖಗಳಿಗೂ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಿರುವುದು ಗಮನ ಸೆಳೆಯಿತು.

ಈ ಹಿಂದೆ ವಿಧಾನಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಯು.ಟಿ. ಖಾದರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸಚಿವ ಸ್ಥಾನ ದೊರೆತಿದೆ.

ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಹಾಗೂ ಗಣ್ಯರು ಸಾಕ್ಷಿಯಾದರು.

ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ರಾಜ್ಯ ಉಸ್ತುವಾರಿ ರಣಧೀಪ್ ಸಿಂಗ್ ಸುರ್ಜೇವಾಲಾ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಸಮಾರಂಭದಲ್ಲಿ ಭಾಗವಹಿಸಿ ನೂತನ ಸರ್ಕಾರಕ್ಕೆ ಶುಭ ಕೋರಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada