ಬಾಗಲಕೋಟೆ, 05 ಆಗಸ್ಟ್ (ಹಿ.ಸ.)
ಆಯಂಕರ್ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪಟ್ಟಣದಲ್ಲಿ ಇಂದು ಶಾಸಕ ಆರ್.ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಲೋಕಾಪುರದ ಪ್ರಮುಖ ವೃತ್ತದಲ್ಲಿ ಜಮಾಯಿಸಿದ ಬೆಂಬಲಿಗರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಆರ್.ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯ ವೇಳೆ ಕೆಲವರು ರಸ್ತೆಯ ಮಧ್ಯೆ ಟಯರ್ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪ್ರತಿಭಟನಾಕಾರರು, ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ನಾಯಕರಾಗಿರುವ ಶಾಸಕ ಆರ್.ಬಿ. ತಿಮ್ಮಾಪುರ ಅವರು ಪಕ್ಷ ಸಂಘಟನೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಆದ್ದರಿಂದ ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಬೆಂಕಿ ನಂದಿಸಿ ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರು, ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕಾದರೆ ಆರ್.ಬಿ. ತಿಮ್ಮಾಪುರ ಅವರಿಗೆ ಆದ್ಯತೆ ನೀಡಬೇಕು. ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮರುಪರಿಶೀಲಿಸಿ ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande

