Dailyhunt Logo
  • Light mode
    Follow system
    Dark mode
    • Play Story
    • App Story
ನಾಗರಾಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮೇಟಿ ಚಾಲನೆ

ನಾಗರಾಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮೇಟಿ ಚಾಲನೆ

ಬಾಗಲಕೋಟೆ, 02 ಜುಲೈ (ಹಿ.ಸ.):

ಯಂಕರ್ : ಗ್ರಾಮೀಣ ಪ್ರದೇಶಗಳಲ್ಲಿ ಸುಗಮ ಸಂಚಾರ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಬಾಗಲಕೋಟೆ ತಾಲೂಕಿನ ನಾಗರಾಳ ಹಾಗೂ ನಾಗಸಂಪಗಿ ಗ್ರಾಮಗಳಲ್ಲಿ ಒಟ್ಟು ₹95 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಅವರು ಗುರುವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ನಾಗರಾಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ₹50 ಲಕ್ಷ ವೆಚ್ಚದಲ್ಲಿ ಡಾಂಬರೀಕರಣ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ನಾಗಸಂಪಗಿ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ₹45 ಲಕ್ಷ ವೆಚ್ಚದಲ್ಲಿ ಡಾಂಬರೀಕರಣ ರಸ್ತೆ ನಿರ್ಮಿಸಲಾಗುತ್ತಿದೆ.

ಈ ಎರಡೂ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಗ್ರಾಮಸ್ಥರಿಗೆ ಉತ್ತಮ ರಸ್ತೆ ಸಂಪರ್ಕ ದೊರೆಯಲಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ದೈನಂದಿನ ಸಂಚಾರ ಮತ್ತಷ್ಟು ಸುಲಭವಾಗಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಎಚ್. ಮೇಟಿ, ಗ್ರಾಮೀಣ ಅಭಿವೃದ್ಧಿಗೆ ಗುಣಮಟ್ಟದ ರಸ್ತೆ ಜಾಲ ಅತ್ಯಗತ್ಯವಾಗಿದೆ. ಉತ್ತಮ ರಸ್ತೆಗಳ ನಿರ್ಮಾಣದಿಂದ ಜನರ ಸಮಯ ಉಳಿತಾಯವಾಗುವುದರ ಜೊತೆಗೆ ಕೃಷಿ ಉತ್ಪನ್ನಗಳ ಸಾಗಣೆ, ವ್ಯಾಪಾರ-ವಹಿವಾಟು ಮತ್ತು ತುರ್ತು ಸೇವೆಗಳ ಸಂಚಾರಕ್ಕೂ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಗುರಿಯೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗುತ್ತಿರುವುದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿ, ಶೀಘ್ರದಲ್ಲೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada