Dailyhunt Logo
  • Light mode
    Follow system
    Dark mode
    • Play Story
    • App Story
ಸಾರ್ವಜನಿಕರ ಎದುರಲ್ಲೇ ಪಿಡಿಒಗೆ ತರಾಟೆ ತೆಗೆದುಕೊಂಡ ಶಾಸಕ:ಇಲ್ಲಿಂದ ಜಾಗ ಬಿಡು ಎಂದು ಕಿಡಿ

ಸಾರ್ವಜನಿಕರ ಎದುರಲ್ಲೇ ಪಿಡಿಒಗೆ ತರಾಟೆ ತೆಗೆದುಕೊಂಡ ಶಾಸಕ:ಇಲ್ಲಿಂದ ಜಾಗ ಬಿಡು ಎಂದು ಕಿಡಿ

ಬಾಗಲಕೋಟೆ, 03 ಜುಲೈ (ಹಿ.ಸ.)

ಯಂಕರ್ : ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ವೇಳೆ ಸಾರ್ವಜನಿಕರ ಎದುರಲ್ಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಹಿರೇಮಠ ಅವರನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ಶಾಸಕ ಜೆ.ಟಿ. ಪಾಟೀಲ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ನಡೆದಿದೆ.

ಈ ವೇಳೆ ಅಧಿಕಾರಿಯ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಕೆಬ್ಬಣ ತುಕ್ಕು ಹಿಡಿದೈತಿ, ಇಲ್ಲಿಂದ ಜಾಗ ಬಿಡು ಎಂದು ಕಿಡಿಕಾರಿದರೆಂದು ಸ್ಥಳದಲ್ಲಿದ್ದವರು ತಿಳಿಸಿದ್ದಾರೆ. ಈ ಘಟನೆ ಸಾರ್ವಜನಿಕರ ಗಮನ ಸೆಳೆದಿದೆ. ಈ ಘಟನೆಯ ಕುರಿತು ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ಕುರಿತು ಪರಿಶೀಲನೆ ನಡೆಸುತ್ತಿದ್ದ ವೇಳೆ ಶಾಸಕ ಜೆ.ಟಿ. ಪಾಟೀಲ್ ಅವರು ಪಿಡಿಒ ಶಿವಲಿಂಗಯ್ಯ ಹಿರೇಮಠ ಅವರನ್ನು ಪ್ರಶ್ನಿಸಿದರು. ಕಾಮಗಾರಿಗಳ ವಿಳಂಬ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಅಧಿಕಾರಿಗಳ ಜವಾಬ್ದಾರಿಯುತ ಕಾರ್ಯವೈಖರಿ ಅಗತ್ಯ ಎಂದು ಸೂಚಿಸಿದರು.

ಸ್ಥಳದಲ್ಲಿದ್ದ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದಿದ್ದು, ಕುಡಿಯುವ ನೀರು, ರಸ್ತೆ, ಸ್ವಚ್ಛತೆ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಅಹವಾಲು ಸಲ್ಲಿಸಿದರು. ಈ ವೇಳೆ ಅಧಿಕಾರಿಗಳ ಕಾರ್ಯಕ್ಷಮತೆ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದ ಶಾಸಕರು, ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿಯೂ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕ ಸೇವೆಯಲ್ಲಿ ಅಧಿಕಾರಿಗಳ ಜವಾಬ್ದಾರಿ ಮತ್ತು ಜನಪ್ರತಿನಿಧಿಗಳ ಮೇಲ್ವಿಚಾರಣೆ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada