ಹೊಸದಿಗಂತ ವರದಿ ಬೆಳಗಾವಿ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ವ್ಯಾಪಕವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂರು ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.
ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶ, ಖಾನಾಪುರ ಹಾಗೂ ನಿಪ್ಪಾಣಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬುಧವಾರ ಜುಲೈ 8 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕೃತವಾಗಿ ಆದೇಶಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ
ಕಳೆದ ಎರಡು ದಿನಗಳಿಂದ ಬೆಳಗಾವಿ ಹಾಗೂ ಮಲೆನಾಡು ಭಾಗವಾದ ಖಾನಾಪುರದಲ್ಲಿ ಅವಿರಾಮವಾಗಿ ಮಳೆ ಸುರಿಯುತ್ತಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರಿಗೆ ಸಂಪರ್ಕಕ್ಕೆ ಅಲ್ಲಲ್ಲಿ ಅಡಚಣೆಯಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳಲು ತೊಂದರೆಯಾಗಬಹುದು ಮತ್ತು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಈ ತೀರ್ಮಾನ ಕೈಗೊಂಡಿದ್ದಾರೆ.
ಯಾರಿಗೆ ರಜೆ?:
ನಿಪ್ಪಾಣಿ, ಖಾನಾಪುರ ಮತ್ತು ಬೆಳಗಾವಿ (ನಗರ ಹಾಗೂ ಗ್ರಾಮೀಣ) ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಈ ರಜೆ ಅನ್ವಯಿಸಲಿದೆ.
ಉಳಿದ ತಾಲ್ಲೂಕುಗಳು:
ಸದ್ಯಕ್ಕೆ ಈ ಮೂರು ತಾಲ್ಲೂಕುಗಳನ್ನು ಹೊರತುಪಡಿಸಿ, ಜಿಲ್ಲೆಯ ಉಳಿದ ಭಾಗಗಳಲ್ಲಿ ಮಳೆಯ ತೀವ್ರತೆ ನೋಡಿಕೊಂಡು ಆಯಾ ತಹಶೀಲ್ದಾರ್‌ಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ: ಶಿಕ್ಷಕ ಅಮಾನತು!
ಜಿಲ್ಲಾಡಳಿತದ ಮನವಿ:
"ಮಳೆ ತೀವ್ರವಾಗಿರುವುದರಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅನಗತ್ಯವಾಗಿ ನದಿ, ಹಳ್ಳ ಹಾಗೂ ಜಲಪಾತಗಳ ಬಳಿ ತೆರಳಬಾರದು. ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣವೇ ಸ್ಥಳೀಯ ಆಡಳಿತವನ್ನು ಸಂಪರ್ಕಿಸಬೇಕು" ಎಂದು ಜಿಲ್ಲಾಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.
ಮಳೆಯ ಆರ್ಭಟ ಹೀಗೆಯೇ ಮುಂದುವರಿದರೆ ರಜೆಯನ್ನು ವಿಸ್ತರಿಸುವ ಸಾಧ್ಯತೆಯೂ ಇರಲಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಸ್ಥಳೀಯ ಶಾಲಾ ಮುಖ್ಯಸ್ಥರ ಹಾಗೂ ಜಿಲ್ಲಾಡಳಿತದ ಮುಂದಿನ ಪ್ರಕಟಣೆಗಳನ್ನು ಗಮನಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

