ಬೆಂಗಳೂರು: ರಾಜ್ಯದಲ್ಲಿ 40 ವರ್ಷ ಮೇಲ್ಪಟ್ಟವರಿಗೆ ಉಚಿತ ದೃಷ್ಟಿ ತಪಾಸಣೆ ಮತ್ತು ಓದುವ ಕನ್ನಡಕಗಳನ್ನು ಒದಗಿಸುವ ಕಾರ್ಯಕ್ರಮ ಜಾರಿಗೊಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ರಿಸ್ಟೋರಿಂಗ್ ಮಿಷನ್ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಆಯುಷ್ಮಾನ್ ಆರೋಗ್ಯ ಮಂದಿರ ಉಪ ಕೇಂದ್ರಗಳ ಮೂಲಕ ಈ ಕಾರ್ಯಕ್ರಮ ಜಾರಿಗೆ ತರಲು ಉದ್ದೇಶಿಸಲಾಗಿದೆ.
ಮೊದಲ ಹಂತದಲ್ಲಿ ಯಾದಗಿರಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ 2025ರ ಅಕ್ಟೋಬರ್ ನಲ್ಲಿ ಆಶಾಕಿರಣ ಯೋಜನೆಯಡಿ ಕ್ಷೇತ್ರ ಮೌಲ್ಯಮಾಪನ ಮಾಡಲಾಗಿತ್ತು. ಈ ವೇಳೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಳಗೊಂಡ ಜಂಟಿ ತಂಡ ಮಾಡಿದ ಶಿಫಾರಸುಗಳ ಆಧರಿಸಿ ಕಾರ್ಯಕ್ರಮ ರೂಪಿಸಲಾಗಿದೆ.
ಈ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ತಪಾಸಣೆ ನಡೆಸಲಿದ್ದಾರೆ. ಮುಂದಿನ ಹಂತಗಳಲ್ಲಿ ರಾಜ್ಯಾದ್ಯಂತ ಯೋಜನೆ ವಿಸ್ತರಿಸಲಾಗುವುದು ಎನ್ನಲಾಗಿದೆ.
ಚಿತ್ರಕೃಪೆ: ಎಐ

