ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರ5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಆಲಿ ಕಲ್ಲು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಯಚೂರು, ಬಳ್ಳಾರಿ, ವಿಜಯನಗರ, ಯಾದಗಿರಿ, ಕಲಬುರಗಿ, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಮುನ್ಸೂಚನೆ ನೀಡಲಾಗಿರುವ ಈ ಜಿಲ್ಲೆಗಳಲ್ಲಿ ಮೇ 7ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

