ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ವೇಳೆ ಜನಿವಾರ ಮತ್ತು ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ತೊಂದರೆಗಳಾದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲು ಬಯಸಿದರೆ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು, ಆದರೆ ಕೃಪಾಂಕ ನೀಡಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸಿಇಟಿ ವೇಳೆ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಮತ್ತೊಂದು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಸಿಇಟಿ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಬಗ್ಗೆ ಸರ್ಕಾರಕ್ಕೆ ಸಲ್ಲಿಕೆ ಆದ ವರದಿಯಲ್ಲಿ ಕಾಲೇಜಿನ ಲೋಪವಿರುವುದು ದೃಢಪಟ್ಟಿದೆ. ಉದ್ದೇಶಪೂರ್ವಕವಾಗಿ ಜನಿವಾರ ತೆಗೆಸಿರುವುದು ಬೆಳಕಿಗೆ ಬಂದಿದ್ದು, ಹೀಗಾಗಿ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಮಡಿವಾಳದ ಖಾಸಗಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಲಾಗಿತ್ತು. ಚಿಕ್ಕಬಳ್ಳಾಪುರದಲ್ಲಿ ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಭೌತಶಾಸ್ತ್ರ ಪರೀಕ್ಷೆ ಬರೆದಿಲ್ಲ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಪೋಷಕರು ಒಪ್ಪಿಗೆ ನೀಡಿದರೆ ಮರು ಪರೀಕ್ಷೆ ನಡೆಸಲು ಅವಕಾಶ ನೀಡಲಾಗುವುದು. ಕಾನೂನು ಸಮಸ್ಯೆ ಆಗಬಹುದಾದ ಕಾರಣದಿಂದ ಕೃಪಾಂಕ ನೀಡಲು ಆಗುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

