ರಾಯಚೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ರಾಯಚೂರು ಜಿಲ್ಲೆಗೆ ಯಾವುದೇ ಪ್ರಾತಿನಿಧ್ಯ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ರವಾನಿಸಿರುವ ಅವರು, ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸದಿರುವುದು ತಮಗೆ ತೀವ್ರ ನಿರಾಶೆ ತಂದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮಹತ್ವಾಕಾಂಕ್ಷಿ ಜಿಲ್ಲೆಗೆ ಸಿಗದ ಮಂತ್ರಿಗಿರಿ:
ಕೇಂದ್ರ ನೀತಿ ಆಯೋಗದ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯು ಮಹತ್ವಾಕಾಂಕ್ಷಿ (Aspirational District) ಜಿಲ್ಲೆಯಾಗಿ ಗುರುತಿಸಿಕೊಂಡಿದೆ. ಇಂತಹ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಸಚಿವ ಸ್ಥಾನದಿಂದ ವಂಚಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ಕಾರಣಕ್ಕಾಗಿಯೇ ನಿಗಮದ ಅಧ್ಯಕ್ಷ ಹುದ್ದೆ ತೊರೆಯುವ ನಿರ್ಧಾರಕ್ಕೆ ಬಂದಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಲವು ಹಿರಿಯ ನಾಯಕರು ಹಾಗೂ ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿದ್ದು, ದದ್ದಲ್ ಅವರ ಈ ರಾಜೀನಾಮೆ ನಿರ್ಧಾರವು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

