ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಆರಂಭದ ತಿಂಗಳಾದ ಜೂನ್‌ನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ತೀವ್ರ ಮಳೆ ಕೊರತೆ ಎದುರಾಗಿದೆ. ಮುಂಗಾರು ಪ್ರವೇಶ ಪಡೆದಿದ್ದರೂ ಸಹ ಸಕಾಲದಲ್ಲಿ ಮಳೆ ಸುರಿಯದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಬರಗಾಲದ ಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ.
ಮಳೆಯ ನಂಬಿ ಬಿತ್ತನೆಗೆ ಸಜ್ಜಾಗಿದ್ದ ರೈತರು ಕಂಗಾಲಾಗಿದ್ದು, ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ.
ಮಳೆಯ ಕೊರತೆಯ ನೇರ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳ ಮೇಲೆ ಬೀರಿದೆ. ಬಹುತೇಕ ಜಲಾಶಯಗಳಿಗೆ ನೀರಿನ ಒಳಹರಿವು ಸಂಪೂರ್ಣ ಶೂನ್ಯಕ್ಕೆ ತಲುಪಿದ್ದರೆ, ಇನ್ನು ಕೆಲವು ಜಲಾಶಯಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಒಳಹರಿವು ದಾಖಲಾಗಿದೆ. ಹೀಗಾಗಿ ಸದ್ಯಕ್ಕೆ ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ತಳಮಟ್ಟಕ್ಕೆ ತಲುಪಿದೆ. ಇದು ಕೇವಲ ಕೃಷಿ ಮತ್ತು ಕುಡಿಯುವ ನೀರಿಗೆ ಮಾತ್ರವಲ್ಲದೆ, ಇಂಧನ ವಲಯಕ್ಕೂ ಭಾರಿ ಹೊಡೆತ ನೀಡಿದೆ.
ಜಲಾಶಯಗಳು ಬತ್ತಿ ಹೋಗುತ್ತಿರುವುದರಿಂದ ರಾಜ್ಯದ ಪ್ರಮುಖ ಜಲವಿದ್ಯುತ್ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಗಣನೀಯವಾಗಿ ಕುಸಿತ ಕಂಡಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ನದಿ, ಜಲಾಶಯಗಳು ತುಂಬಿ ಹರಿಯುವುದರಿಂದ ಜಲವಿದ್ಯುತ್ ಘಟಕಗಳ ಮೂಲಕವೇ ಹೆಚ್ಚಿನ ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡಿ ರಾಜ್ಯದ ಬೇಡಿಕೆಯನ್ನು ಈಡೇರಿಸಲಾಗುತ್ತದೆ. ಆದರೆ ಈ ಬಾರಿ ನೀರಿನ ಕೊರತೆಯಿಂದಾಗಿ ಜಲವಿದ್ಯುತ್ ಉತ್ಪಾದನೆ ತೀವ್ರವಾಗಿ ಕುಂಠಿತಗೊಂಡಿದೆ.
ಸಾಮಾನ್ಯವಾಗಿ ಬೇಸಿಗೆಯ ಸಮಯದಲ್ಲಿ ರಾಜ್ಯದ ವಿದ್ಯುತ್ ಬೇಡಿಕೆಯನ್ನು ಉಷ್ಣ ವಿದ್ಯುತ್ ಸ್ಥಾವರಗಳ (Thermal Power Plants) ಮೂಲಕ ನಿರ್ವಹಿಸಲಾಗುತ್ತದೆ. ಆದರೆ ಮಳೆಗಾಲ ಆರಂಭವಾಗುತ್ತಿದ್ದಂತೆ ಜಲವಿದ್ಯುತ್ ಬಳಕೆಯನ್ನು ಹೆಚ್ಚಿಸಿ, ಉಷ್ಣ ವಿದ್ಯುತ್ ಸ್ಥಾವರಗಳಲ್ಲಿನ ಉತ್ಪಾದನೆಯನ್ನು ಕಡಿಮೆ ಮಾಡುವುದು ಇಂಧನ ಇಲಾಖೆಯ ವಾಡಿಕೆ. ಆದರೆ ಈ ಬಾರಿ ಮುಂಗಾರು ಕೈಕೊಟ್ಟಿರುವುದರಿಂದ ಇಲಾಖೆಯ ಈ ಸಾಂಪ್ರದಾಯಿಕ ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದ್ದು, ವಿದ್ಯುತ್ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ.
ಮಳೆಯ ಕೊರತೆಯ ನಡುವೆಯೂ ಇತ್ತ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಮಾತ್ರ ಗಣನೀಯವಾಗಿ ತಗ್ಗಿಲ್ಲ. ಕೆಪಿಟಿಸಿಎಲ್ (KPTCL) ನೀಡಿರುವ ಮಾಹಿತಿಯ ಪ್ರಕಾರ, ಪ್ರಸ್ತುತ ರಾಜ್ಯದಲ್ಲಿ ಗರಿಷ್ಠ ವಿದ್ಯುತ್ ಬೇಡಿಕೆ 13,533 ಮೆಗಾ ವ್ಯಾಟ್‌ಗೆ ತಲುಪಿದೆ. ಸದ್ಯ ಪ್ರತಿದಿನ ಸುಮಾರು 240 ರಿಂದ 258 ಮಿಲಿಯನ್ ಯುನಿಟ್ ವಿದ್ಯುತ್ ಬಳಕೆಯಾಗುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದಿನದ ವಿದ್ಯುತ್ ಬಳಕೆ 218 ಮಿಲಿಯನ್ ಯುನಿಟ್ ಇತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವಿದ್ಯುತ್ ಬಳಕೆ ಗಣನೀಯವಾಗಿ ಹೆಚ್ಚಾಗಿದ್ದು, ಉತ್ಪಾದನೆ ಕುಸಿದಿರುವುದು ಇಂಧನ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

