Dailyhunt Logo
  • Light mode
    Follow system
    Dark mode
    • Play Story
    • App Story
ವಾಲ್ಮೀಕಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿದ 25 ವಿದ್ಯಾರ್ಥಿಗಳು ಅಸ್ವಸ್ಥ

ವಾಲ್ಮೀಕಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿದ 25 ವಿದ್ಯಾರ್ಥಿಗಳು ಅಸ್ವಸ್ಥ

Kannadavahini 3 days ago

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದ ವಾಲ್ಮೀಕಿ ಅನುದಾನಿತ ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಅನ್ನ ಬಜ್ಜಿ ಸೇವಿಸಿದ ಬಳಿಕ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದೆ.

ಮಧ್ಯಾಹ್ನ ಶಾಲೆಯಲ್ಲಿ ನೀಡಲಾದ ಬಿಸಿಯೂಟ ಸೇವಿಸಿದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ವಾಂತಿ ಹಾಗೂ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡಿವೆ.

ಕೂಡಲೇ ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಕೆಲವರನ್ನು ಲಭ್ಯವಿದ್ದ ದ್ವಿಚಕ್ರ ವಾಹನ ಹಾಗೂ ಇತರೆ ವಾಹನಗಳ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೋಷಕರು ಆಸ್ಪತ್ರೆಗೆ ಧಾವಿಸಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಆತಂಕ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ವಿದ್ಯಾರ್ಥಿಗಳಿಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಬಹುತೇಕ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಬಿಸಿಯೂಟದಿಂದಲೇ ಅಸ್ವಸ್ಥತೆ ಉಂಟಾಗಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಘಟನೆ ಕುರಿತು ಪರಿಶೀಲನೆ ನಡೆಸಿದ್ದು, ಅಗತ್ಯವಿದ್ದರೆ ಆಹಾರದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಸಾಧ್ಯತೆ ಇದೆ.

ಘಟನೆ ಕುರಿತು ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದು, ಪರಿಶೀಲನಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini