ಕರಾಚಿ : ನೈಋತ್ಯ ಪಾಕಿಸ್ತಾನದಲ್ಲಿ (Pakistan) ಭೀಕರ ರಸ್ತೆ ಅಪಘಾತವೊಂದು (Accident) ಸಂಭವಿಸಿದ್ದು, ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಬಸ್ಸೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಈ ಭೀಕರ ದುರಂತದಲ್ಲಿ ಸುಮಾರು 40 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಈ ಬಸ್, ಚಾಲಕನ ನಿಯಂತ್ರಣ ತಪ್ಪಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕರುಣಾಜನಕ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಆಡಳಿತ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಗೊಂಡ ಎಂಟು ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಪಾಕಿಸ್ತಾನದಲ್ಲಿ ಕಳಪೆ ರಸ್ತೆಗಳು, ಮಿತಿಮೀರಿದ ವೇಗ ಮತ್ತು ಸಂಚಾರ ನಿಯಮಗಳ ಉಲ್ಲಂಘನೆಯಿಂದಾಗಿ ಇಂತಹ ಭೀಕರ ರಸ್ತೆ ಅಪಘಾತಗಳು ಪದೇ ಪದೇ ವರದಿಯಾಗುತ್ತಿರುತ್ತವೆ.

