ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಕೆ.ಎಸ್. ಈಶ್ವರಪ್ಪ (K. S. Eshwarappa) ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ (Karnataka High Court) ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು (ಜುಲೈ 03) ವಜಾಗೊಳಿಸಿ ಆದೇಶಿಸಿದೆ.
ಶಿವಮೊಗ್ಗ ಮೂಲದ ವಕೀಲ ಬಿ. ವಿನೋದ್ ಎಂಬುವವರು ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕೆ.ಇ. ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಈ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಈಶ್ವರಪ್ಪ ಅವರಿಗೆ ಕ್ಲೀನ್ ಚೀಟ್ ನೀಡಿ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ (ತನಿಖಾ ವರದಿ) ಸಲ್ಲಿಕೆ ಮಾಡಿದ್ದರು. ಲೋಕಾಯುಕ್ತ ಪೊಲೀಸರ ಈ ನಡೆಯನ್ನು ಪ್ರಶ್ನಿಸಿ ದೂರುದಾರ ವಿನೋದ್ ಅವರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ದೂರುದಾರರ ಅರ್ಜಿಯನ್ನು ಪುರಸ್ಕರಿಸಿದ್ದ ವಿಶೇಷ ನ್ಯಾಯಾಲಯವು, ಪ್ರಕರಣದ ಕುರಿತು ಮರು ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿತ್ತು. ಈ ಆದೇಶದ ಅನ್ವಯ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಈಶ್ವರಪ್ಪ ಮತ್ತು ಅವರ ಕುಟುಂಬಸ್ಥರ ವಿರುದ್ಧ ಹೊಸದಾಗಿ ಎಫ್‌ಐಆರ್ (FIR) ದಾಖಲಿಸಿದ್ದರು. ಈ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು, ಆದರೆ ಈಗ ಅಲ್ಲಿಯೂ ಅವರಿಗೆ ನಿರಾಶೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಕೇಸ್ ರದ್ದು ಕೋರಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ! ಕೆ.ಎಸ್. ಈಶ್ವರಪ್ಪ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು, ಲೋಕಾಯುಕ್ತ ಪ್ರಕರಣದಲ್ಲಿ ತಮ್ಮ ಕಕ್ಷಿದಾರರಿಗೆ ಬಂಧನದಿಂದ ರಕ್ಷಣೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ತೀವ್ರ ಪ್ರತಿರೋಧ ಒಡ್ಡಿದ ಲೋಕಾಯುಕ್ತ ಪರ ವಿಶೇಷ ಸಾರ್ವಜನಿಕ ಅಭಿಯೋಜಕ (SPP) ವೆಂಕಟೇಶ್ ಅರಬಟ್ಟಿ ಅವರು, ಆರೋಪಿಯು ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದರೆ, ಅವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ನ್ಯಾಯಪೀಠದ ಮುಂದೆ ಸ್ಪಷ್ಟಪಡಿಸಿದರು. ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠವು, ಪ್ರಕರಣ ರದ್ದು ಕೋರಿದ್ದ ಈಶ್ವರಪ್ಪ ಅವರ ಅರ್ಜಿಯನ್ನು ವಜಾಗೊಳಿಸಿತು. : INDIRA KIT: ವಿವಾದದ ಸುಳಿಯಲ್ಲಿ ರಾಜ್ಯ ಸರ್ಕಾರದ 'ಇಂದಿರಾ ಕಿಟ್' ಭಾಗ್ಯ, ಕಾಗದದ ಮೇಲಷ್ಟೇ ಉಳಿಯಿತೇ ಘೋಷಣೆ?
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಆರ್.ಶಾಲಿನಿ ವಿರುದ್ಧ ಲೋಕಾಯುಕ್ತರು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ರದ್ದು ಕೋರಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.

