ಮಧ್ಯಪ್ರದೇಶ: ಇಲ್ಲಿನ ಟಿಕಮ್‌ಗಢದಲ್ಲಿ ಇತ್ತೀಚೆಗೆ ನಡೆದ ಒಂದು ಘಟನೆ ಎಲ್ಲರ ಗಮನ ಸೆಳೆದಿದೆ. ಅಲ್ಲಿನ ಮುನ್ಸಿಪಲ್ ಕಾರ್ಪೊರೇಷನ್ (Municipal Corporation) ನಡೆಸಿದ ಒತ್ತುವರಿ ತೆರವು ಕಾರ್ಯಾಚರಣೆಯ (Encroachment clearance operation) ವಿರುದ್ಧ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ (Uma Bharti) ಅವರು ರಸ್ತೆಗೆ ಇಳಿದು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು ಸಾಮಾನ್ಯ ವ್ಯಾಪಾರಿಯಂತೆ ತಳ್ಳುಗಾಡಿಯಲ್ಲಿ ಪೋಹಾ ಮತ್ತು ಜಿಲೇಬಿ ಮಾರಾಟ ಮಾಡುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ಬೀದಿ ಬದಿಯ ಸಣ್ಣ ವ್ಯಾಪಾರಿಗಳ ಬದುಕಿಗೆ ತೊಂದರೆ ನೀಡುತ್ತಿರುವ ಆಡಳಿತದ ಕ್ರಮವನ್ನು ಖಂಡಿಸಿದ ಅವರು, ಬಡವರ ಹೊಟ್ಟೆ ಮೇಲೆ ಹೊಡೆಯುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಧರಣಿಯ ಅಂಗವಾಗಿ ಸ್ವತಃ ಉಪಾಹಾರ ತಯಾರಿಸಿ ಗ್ರಾಹಕರಿಗೆ ಬಡಿಸುವ ಮೂಲಕ ವ್ಯಾಪಾರಿಗಳಿಗೆ ನೈತಿಕ ಬೆಂಬಲ ನೀಡಿದರು.
ಬಡ ವ್ಯಾಪಾರಿಗಳ ಜೀವನೋಪಾಯವನ್ನು ಕಸಿದುಕೊಳ್ಳುವ ಆಡಳಿತದ ನಿರ್ಧಾರವು ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಉಮಾ ಭಾರತಿ ಟೀಕಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು ಮತ್ತು ರಾಜ್ಯದ ಮುಖ್ಯಮಂತ್ರಿಯವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ ಅವರು, ತೆರವುಗೊಳಿಸಲಾದ ವ್ಯಾಪಾರಿಗಳಿಗೆ ಅದೇ ಸ್ಥಳದಲ್ಲಿ ಮರು ವ್ಯಾಪಾರ ಮಾಡಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬಡವರ ಬದುಕಿಗೆ ಪರ್ಯಾಯ ವ್ಯವಸ್ಥೆ ಮಾಡದೆ ಅವರ ಉದ್ಯೋಗ ಕಿತ್ತುಕೊಂಡರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

