ಶಿವಮೊಗ್ಗ : ಶಿವಮೊಗ್ಗದಲ್ಲಿ (Shivamogga ) ತನ್ನದೇ ಸ್ವಂತ ಅಜ್ಜಿಯನ್ನು (GrandMother )ಅತ್ಯಂತ ಕ್ರೂರವಾಗಿ ಕೊಲೆ (crime ) ಮಾಡಿ ತಲೆಮರೆಸಿಕೊಂಡಿದ್ದ ಪಾಪಿ ಮೊಮ್ಮಗನನ್ನು ಬಂಧಿಸಲು ತೆರಳಿದ್ದ ವೇಳೆ, ಆತ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾದ ಭೀಕರ ಘಟನೆ ನಡೆದಿದೆ.
ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಆರೋಪಿ ಕಿಶೋರ್ (28) ಎಂಬಾತನ ಕಾಲಿಗೆ ಗುಂಡೇಟು ತಗುಲಿದ್ದು, ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಸಿಬಂದಿ ಗಣೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗ ನಗರ ಹೊರವಲಯದ ವಾಜಪೇಯಿ ಲೇಔಟ್‌ನಲ್ಲಿ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿ ಕಿಶೋರ್ ಪೊಲೀಸ್ ಸಿಬಂದಿ ಗಣೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸತ್ಯನಾರಾಯಣ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರು. ಆದರೂ ಆರೋಪಿ ಪೊಲೀಸರ ಸೂಚನೆ ಪಾಲಿಸದ ಹಿನ್ನೆಲೆಯಲ್ಲಿ ಆತ್ಮರಕ್ಷಣೆ ಹಾಗೂ ಬಂಧನದ ಉದ್ದೇಶದಿಂದ ಕಿಶೋರ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

