ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಲೋಪ ಹಾಗೂ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಮತ್ತು ಪ್ರಹ್ಲಾದ್ ಜೋಶಿ (Pralhad Joshi) ನೇತೃತ್ವದ ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿಕೂಟದ ಉನ್ನತ ನಿಯೋಗವು ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Chief Election Commissioner Gyanesh Kumar) ಅವರಿಗೆ ದಾಖಲೆ ಸಮೇತ ದೂರು ನೀಡಿದೆ.
ದೂರು ಸಲ್ಲಿಕೆಯ ಬಳಿಕ ರಾಷ್ಟ್ರ ರಾಜಧಾನಿಯಲ್ಲೇ ಜಂಟಿ ಸುದ್ದಿಗೋಷ್ಠಿ ನಡೆಸಿದ ಮೈತ್ರಿ ನಾಯಕರು, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಸ್ವರೂಪದ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. ಈ ನಿಯೋಗದಲ್ಲಿ ಕೇಂದ್ರ ಸಚಿವರೊಂದಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ್ ಬೆಲ್ಲದ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಲ್ಪಿ ನಾಯಕ ಸುರೇಶ್ ಬಾಬು ಹಾಗೂ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿದ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಸ್‌ಐಆರ್ ಪ್ರಕ್ರಿಯೆಯನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮೊದಲು ವಿರೋಧ ಮಾಡಿತ್ತು. ಆದರೆ ಈಗ ಅವರೇ ಅದನ್ನು ಬುಡಮೇಲು ಮಾಡಲು ಹೊರಟಿದ್ದಾರೆ. ನಿಯಮಗಳ ಪ್ರಕಾರ ಅಧಿಕಾರಿಗಳು ಮನೆ ಮನೆಗೆ ಹೋಗಿ ಮತಪಟ್ಟಿ ಪರಿಷ್ಕರಣೆ ಮಾಡಬೇಕು. ಆದರೆ ಕರ್ನಾಟಕದಲ್ಲಿ ಮಸೀದಿ, ದರ್ಗಾ ಹಾಗೂ ಸಮುದಾಯ ಭವನಗಳಲ್ಲಿ ಕುಳಿತು ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ" ಎಂದು ನೇರ ಆರೋಪ ಮಾಡಿದರು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರದ ಕೈಕೆಳಗಿರುವ ಅಧಿಕಾರಿಗಳನ್ನೇ ಬಳಸಿಕೊಂಡು ಈ ಅಕ್ರಮ ಎಸಗಲಾಗುತ್ತಿದೆ. ನಕಲಿ ಮತಗಳನ್ನು ಸೃಷ್ಟಿಸಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ. ಜನರಿಗೆ ಗ್ಯಾರಂಟಿ ಯೋಜನೆಗಳು ಕಡಿತಗೊಳ್ಳುತ್ತವೆ ಎಂಬ ಭಯ ಹುಟ್ಟಿಸಿ ಅನಗತ್ಯವಾಗಿ ಗಾಬರಿಪಡಿಸಲಾಗುತ್ತಿದೆ. ಈ ಎಲ್ಲ ವಿಷಯಗಳನ್ನು ನಾವು ಮುಖ್ಯ ಚುನಾವಣಾ ಆಯುಕ್ತರ ಗಮನಕ್ಕೆ ತಂದಿದ್ದು, ಅವರು ಕೂಲಂಕಷವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದರು. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಾಂಗ್ಲಾದೇಶದವರ ಹೆಸರನ್ನೂ ಸೇರಿಸುವ ಕೆಲಸವಾಗುತ್ತಿದೆ. ಕಾಂಗ್ರೆಸ್ಸಿಗರು ಹಾದಿಬೀದಿಯಲ್ಲಿ ಫಾರಂಗಳನ್ನು ಹಂಚುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದಿಂದ ದೇಶವನ್ನೇ ಅಪಾಯಕ್ಕೆ ಸಿಲುಕಿಸುವ ಕೆಲಸವಾಗ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬೇರೆ ರಾಜ್ಯದ ಅಧಿಕಾರಿಗಳನ್ನು ನೇಮಿಸಿ ಮತಪಟ್ಟಿ ಪರಿಷ್ಕರಣೆ ನಡೆಸಬೇಕು. ಇತ್ತೀಚೆಗೆ 'ಚುನಾವಣಾ ಆಯೋಗ ಕತ್ತೆ ಕಾಯುತ್ತಿದೆಯಾ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಆರ್. ಅಶೋಕ್ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

