Dailyhunt Logo
  • Light mode
    Follow system
    Dark mode
    • Play Story
    • App Story
ಮಹಿಳೆಯರ ಸ್ವಉದ್ಯೋಗಕ್ಕೆ ಪ್ರೋತ್ಸಾಹ: ಉತ್ಪನ್ನಗಳ ಸರಬರಾಜಿಗೆ ಶಾಸಕ ಬಿ.ಎನ್.ರವಿಕುಮಾರ್ ಚಾಲನೆ

ಮಹಿಳೆಯರ ಸ್ವಉದ್ಯೋಗಕ್ಕೆ ಪ್ರೋತ್ಸಾಹ: ಉತ್ಪನ್ನಗಳ ಸರಬರಾಜಿಗೆ ಶಾಸಕ ಬಿ.ಎನ್.ರವಿಕುಮಾರ್ ಚಾಲನೆ

NAYAN NEWS 6 days ago

ಶಿಡ್ಲಘಟ್ಟ: ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ಉತ್ಪನ್ನಗಳಿಗೆ ಉತ್ತೇಜನ ನೀಡುವ ಜೊತೆಗೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನೆರವಾಗುವ ಉದ್ದೇಶದಿಂದ, ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಹಾಸ್ಟೆಲ್‌ಗಳಿಗೆ ಸರಬರಾಜು ಮಾಡುವ ಕಾರ್ಯಕ್ರಮಕ್ಕೆ ಶಾಸಕ ಬಿ.ಎನ್. ರವಿಕುಮಾರ್ ಅವರು ಚಾಲನೆ ನೀಡಿದರು.

ತಾಲ್ಲೂಕಿನ ಮೇಲೂರು ಗ್ರಾಮದ ಶಾಸಕರ ಗೃಹ ಕಚೇರಿಯಲ್ಲಿ ಶಾಸಕ ಬಿ.ಎನ್. ರವಿಕುಮಾರ್ ಅವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ.ಆರ್. ಅವರ ಸಮ್ಮುಖದಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳ ಕಿಟ್‌ಗಳನ್ನು ಬಿಡುಗಡೆಗೊಳಿಸಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ಅವರಿಗೆ ಹಸ್ತಾಂತರಿಸುವ ಮೂಲಕ ಹಾಸ್ಟೆಲ್‌ಗಳಿಗೆ ಸರಬರಾಜು ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ.ಎನ್. ರವಿಕುಮಾರ್ ಅವರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಸ್ವಂತ ಪರಿಶ್ರಮದಿಂದ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಅವರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ಖರೀದಿಯ ಅವಕಾಶ ಕಲ್ಪಿಸುವುದು ಅಗತ್ಯವಾಗಿದೆ.

ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಹಾಸ್ಟೆಲ್‌ಗಳಿಗೆ ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸಿರುವುದು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮಹಿಳೆಯರು ಸ್ವಸಹಾಯ ಸಂಘಗಳ ಮೂಲಕ ಸ್ವಂತ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಅವರಲ್ಲಿ ಇರುವ ಕೌಶಲ್ಯ ಮತ್ತು ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ದೊರೆತಾಗ ಇನ್ನಷ್ಟು ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸಲು ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮಗಳ ಮೂಲಕ ಮಹಿಳೆಯರ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಹೇಳಿದರು.

ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ಹಾಸ್ಟೆಲ್‌ಗಳಿಗೆ ಸರಬರಾಜು ಮಾಡುವುದರಿಂದ ಉತ್ಪನ್ನಗಳ ಬಳಕೆ ಹಾಗೂ ಮಾರಾಟಕ್ಕೆ ಅವಕಾಶ ದೊರೆಯುವುದರ ಜೊತೆಗೆ ಮಹಿಳೆಯರಿಗೆ ಆದಾಯ ಗಳಿಸಲು ಸಹಕಾರಿಯಾಗಲಿದೆ.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ.ಆರ್.,  ವ್ಯವಸ್ಥಾಪಕ ವಿಜಯ್ ಕುಮಾರ್, ಬ್ಲಾಕ್ ಮ್ಯಾನೇಜರ್ ನರಸಿಂಹ, ವಲಯ ಮೇಲ್ವಿಚಾರಕ ಬಾಲರಾಜು, ಸ್ವಸಹಾಯ ಸಂಘದ ರುಕ್ಮಿಣಿ,  ಶಿಲ್ಪಾ, ಚೈತ್ರಾ, ನಾಗರತ್ನ ಹಾಗೂ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: NAYAN NEWS