ಶಿಡ್ಲಘಟ್ಟ: ನಗರದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಅರ್ಪಿಸುವ ಮೂಲಕ ಕನ್ನಡಾಂಬೆಗೆ ಗೌರವ ಸಲ್ಲಿಸಲಾಯಿತು. ಬಳಿಕ ವಕೀಲರು ಪರಸ್ಪರ ಸಿಹಿ ಹಂಚಿಕೊಂಡು ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ ಅವರು, ಕರ್ನಾಟಕ ರಾಜ್ಯದ ಇತಿಹಾಸ, ಕನ್ನಡ ಭಾಷೆಯ ಪರಂಪರೆ ಹಾಗೂ ರಾಜ್ಯ ಏಕೀಕರಣದ ಮಹತ್ವವನ್ನು ಸ್ಮರಿಸಿದರು.
ಸ್ವಾತಂತ್ರ್ಯಾನಂತರ ಭಾಷಾವಾರು ಪ್ರಾಂತ್ಯಗಳ ರಚನೆಯ ಸಂದರ್ಭದಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯವನ್ನು ರಚಿಸಲಾಯಿತು.
ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿಯನ್ನು ಪ್ರತಿಯೊಬ್ಬರೂ ಗೌರವಿಸಿ ಮುಂದಿನ ಪೀಳಿಗೆಗೆ ಕನ್ನಡದ ಮಹತ್ವವನ್ನು ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಹಿರಿಯ ವಕೀಲ ಎಂ. ಪಾಪಿರೆಡ್ಡಿ ಮಾತನಾಡಿ, 1956ರಲ್ಲಿ ಕರ್ನಾಟಕ ರಾಜ್ಯ ಉದಯವಾದಾಗಿನಿಂದ ಕನ್ನಡ ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ ದೊರೆಯಬೇಕು ಹಾಗೂ ರಾಜ್ಯದ ಎಲ್ಲೆಡೆ ಕನ್ನಡದ ಬಳಕೆ ಹೆಚ್ಚಾಗಬೇಕು ಎಂಬ ಆಶಯವಿದೆ. ಆದರೆ ಇಂದಿಗೂ ಗಡಿಭಾಗದ ಹಲವು ಪ್ರದೇಶಗಳಲ್ಲಿ ಕನ್ನಡ ಭಾಷೆಯ ಬಳಕೆ ನಿರೀಕ್ಷಿತ ಮಟ್ಟದಲ್ಲಿ ಕಂಡುಬರುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕಲಬುರಗಿ, ಬೆಳಗಾವಿ ಹಾಗೂ ಕೆಜಿಎಫ್ ಸೇರಿದಂತೆ ವಿವಿಧ ಗಡಿಭಾಗಗಳಲ್ಲಿ ತೆಲುಗು, ಉರ್ದು, ಮರಾಠಿ ಮತ್ತು ತಮಿಳು ಭಾಷೆಗಳ ಪ್ರಭಾವ ಹೆಚ್ಚಾಗಿದೆ. ಆಯಾ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯನ್ನು ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೂ ಸಮಾನ ಆದ್ಯತೆ ಮತ್ತು ಗೌರವ ದೊರೆಯಬೇಕು ಎಂಬುದು ನಮ್ಮೆಲ್ಲರ ಆಶಯವಾಗಿರಬೇಕು ಎಂದರು.
ಮನೆಗಳಲ್ಲಿ, ಕಚೇರಿಗಳಲ್ಲಿ ಹಾಗೂ ಸಾರ್ವಜನಿಕ ವಲಯಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು. ವಿಶೇಷವಾಗಿ ನ್ಯಾಯಾಲಯ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಕನ್ನಡದ ಬಳಕೆ ಮತ್ತಷ್ಟು ವಿಸ್ತಾರವಾಗಬೇಕು. ಕನ್ನಡ ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಉಪಸ್ಥಿತರಿದ್ದರು.

