Dailyhunt
ಅರ್ಜಿದಾರನಿಗೆ ದಂಡ ವಿಧಿಸಿದ ಹೈಕೋರ್ಟ್

ಅರ್ಜಿದಾರನಿಗೆ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು : ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಲಮಂಗಲದಿಂದ ತುಮಕೂರು ನಡುವಿನ 32 ಕಿ.ಮೀ ಉದ್ದದ ರಸ್ತೆಯಲ್ಲಿ ಬೀದಿ ದೀಪಗಳ ಅಳವಡಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌ , ಅರ್ಜಿದಾರರಿಗೆ 50 ಸಾವಿರ ದಂಡ ವಿಧಿಸಿದೆ.

ಈ ಕುರಿತು ವಕೀಲ ರಮೇಶ್‌ ಎಲ್‌.ನಾಯ್ಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್‌.ಸಿ.ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ. ಜತೆಗೆ, ದಂಡ ಮೊತ್ತವನ್ನು 30 ದಿನದಲ್ಲಿ ಕರ್ನಾಟಕ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಪಾವತಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ ಅರ್ಜಿದಾರ ರಮೇಶ್‌ ನಾಯ್ಕ್ ವಾದ ಮಂಡಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಲಮಂಗಲದಿಂದ ತುಮಕೂರು ನಡುವಿನ 32.5 ಕಿ.ಮೀ ಉದ್ದದ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಿಲ್ಲ ಎಂದು ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು ಎಂಬುದನ್ನು ಯಾವ ಕಾನೂನು ಹೇಳುತ್ತದೆ ಎಂದು ಪ್ರಶ್ನಿಸಿದರು.

ರಮೇಶ್‌ ನಾಯ್ಕ್ ಉತ್ತರಿಸಿ, 18 ವರ್ಷ ಕಾಲ ಈ ಹೆದ್ದಾರಿಯನ್ನು ನಿರ್ವಹಣೆ ಮಾಡಲು ಜೆಎಎಸ್‌ಎಸ್‌ ಟೋಲ್‌ ರೋಡ್‌ ಕಂಪನಿ ಲಿಮಿಟೆಡ್‌ಗೆ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ಒಪ್ಪಂದದಲ್ಲಿ ಈ ವಿಚಾರ ಹೇಳಲಾಗಿದೆ. ಆದರೆ, ಒಪ್ಪಂದದ ಪ್ರತಿಯನ್ನು ನಮಗೆ ಒದಗಿಸುತ್ತಿಲ್ಲ. ಅವಕಾಶ ನೀಡಿದರೆ ಅಗತ್ಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಆಗ ಅರ್ಜಿಯ ಅಂಶಗಳನ್ನು ಪರಿಶೀಲಿಸಿದ ನ್ಯಾಯಪೀಠ, ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸುವುದನ್ನು ಪ್ರತಿಪಾದಿಸುವ ನಿಯಮಗಳು ಮತ್ತು ಆ ಕುರಿತ ದಾಖಲೆಗಳನ್ನು ಅರ್ಜಿದಾರರು ನ್ಯಾಯಾಲಯಕ್ಕೆ ಒದಗಿಸಿಲ್ಲ. ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸುವುದನ್ನು ಕಡ್ಡಾಯ ಎಂದು ಹೇಳುವ ಯಾವ ನಿಯಮಗಳಿಲ್ಲ ಎಂಬುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಕೀಲರು ಹೇಳಿದ್ದಾರೆ ಎಂದು ನುಡಿಯಿತು.

Dailyhunt
Disclaimer: This content has not been generated, created or edited by Dailyhunt. Publisher: News Kannada