ತುಮಕೂರು: ಉಪಾಹಾರ ಸೇವಿಸಿದ ಬಳಿಕ 12 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಣೇಚಂದೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ.
6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ವಿದ್ಯಾರ್ಥಿಗಳು ಉಪಾಹಾರ ಸೇವಿಸಿದ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕರು ಕೂಡಲೇ ಅವರನ್ನು ಮಾಯಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಚಿಕಿತ್ಸೆ ಪಡೆದ 12 ವಿದ್ಯಾರ್ಥಿಗಳ ಪೈಕಿ 9 ಮಂದಿ ಚೇತರಿಸಿಕೊಂಡಿದ್ದಾರೆ. ಆದರೆ ಉಳಿದ ಮೂವರು ವಿದ್ಯಾರ್ಥಿಗಳಿಗೆ ಸುಸ್ತು ಮುಂದುವರಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ಸೂಚನೆಯಂತೆ ಆಂಬುಲೆನ್ಸ್ ಮೂಲಕ ಆದಿಚುಂಚನಗಿರಿ ಐಟಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿದ್ಯಾರ್ಥಿಗಳು ಸೇವಿಸಿದ್ದ ಆಹಾರ ಮತ್ತು ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಅವುಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವಿದ್ಯಾರ್ಥಿಗಳು ಅಸ್ವಸ್ಥರಾಗಲು ಕಾರಣವೇನು ಎಂಬುದು ಪರೀಕ್ಷಾ ವರದಿ ಬಂದ ಬಳಿಕ ಸ್ಪಷ್ಟವಾಗಲಿದೆ.
ಇತ್ತ ವಸತಿ ಶಾಲೆಯಲ್ಲಿರುವ ಇತರ ಮಕ್ಕಳ ಆರೋಗ್ಯದ ಮೇಲೂ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಸ್ಟಾಫ್ ನರ್ಸ್‌ಗಳು ಮಕ್ಕಳ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯದ ಮಾಹಿತಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಎಸ್.ಎ. ಕುಂಜಾ ಅಹಮದ್ ಆಸ್ಪತ್ರೆಗೆ ಹಾಗೂ ಘಟನೆ ನಡೆದ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಕೂಡ ಆಸ್ಪತ್ರೆಗೆ ತೆರಳಿ ಮಕ್ಕಳ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಸಮಾಜ ಕಲ್ಯಾಣಾಧಿಕಾರಿ ರಮೇಶ್ ನಾಯಕ್ ಅವರು ವಸತಿ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಸದ್ಯ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳಲ್ಲಿ ಬಹುತೇಕರು ಚೇತರಿಸಿಕೊಂಡಿರುವುದರಿಂದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಮೂವರು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು, ಆಹಾರ ಮತ್ತು ನೀರಿನ ಮಾದರಿಗಳ ಪ್ರಯೋಗಾಲಯ ವರದಿ ಬಳಿಕ ಅಸ್ವಸ್ಥತೆಗೆ ನಿಖರ ಕಾರಣ ತಿಳಿಯಲಿದೆ.

