Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಹಾಯ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಹಾಯ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ

News Next 4 days ago

ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳು ಮತ್ತಷ್ಟು ಸುಲಭವಾಗಿ ಲಭ್ಯವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸಹಾಯ ಮತ್ತು ಸೌಲಭ್ಯ ಕೇಂದ್ರ ಸ್ಥಾಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ.

ಈ ಕೇಂದ್ರಗಳ ಮೂಲಕ ನಾಗರಿಕರು ಶಾಶ್ವತ ನಿವಾಸ ಪ್ರಮಾಣಪತ್ರ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳಿಗಾಗಿ ಅರ್ಜಿ ಸಲ್ಲಿಸಲು ಅನುಕೂಲವಾಗಲಿದೆ. ಅರ್ಜಿದಾರರಿಗೆ ಸ್ಥಳದಲ್ಲೇ ಅಗತ್ಯ ನೆರವು ದೊರೆಯುವಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಸೂಚಿಸಿದೆ.

ಸಹಾಯ ಕೇಂದ್ರದಲ್ಲಿ ಕಂಪ್ಯೂಟರ್, ಇಂಟರ್‌ನೆಟ್ ಸಂಪರ್ಕ, ಪ್ರಿಂಟರ್, ಸ್ಕ್ಯಾನರ್ ಸೇರಿದಂತೆ ಅಗತ್ಯ ತಾಂತ್ರಿಕ ಸೌಲಭ್ಯಗಳು ಕಡ್ಡಾಯವಾಗಿ ಇರಬೇಕು. ಜೊತೆಗೆ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಕಲ್ಪಿಸಬೇಕೆಂದು ನಿರ್ದೇಶಿಸಲಾಗಿದೆ.

ಪ್ರತಿ ಕೇಂದ್ರದಲ್ಲೂ ‘ಪಂಚಮಿತ್ರ’ ಸಹಾಯವಾಣಿ ಸಂಖ್ಯೆ 8277506000 ಅನ್ನು ಸ್ಪಷ್ಟವಾಗಿ ಪ್ರದರ್ಶಿಸಬೇಕು. ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳು ಈ ಸಹಾಯ ಕೇಂದ್ರದ ದೈನಂದಿನ ಕಾರ್ಯನಿರ್ವಹಣೆಯ ಜವಾಬ್ದಾರಿ ವಹಿಸಲಿದ್ದಾರೆ.

ಈ ವ್ಯವಸ್ಥೆಯ ಒಟ್ಟಾರೆ ಮೇಲ್ವಿಚಾರಣೆಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ವಹಿಸಲಿದ್ದು, ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಹಾಯ ಕೇಂದ್ರಗಳನ್ನು ಶೀಘ್ರದಲ್ಲಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಈ ಹೊಸ ವ್ಯವಸ್ಥೆಯಿಂದ ಗ್ರಾಮೀಣ ಪ್ರದೇಶದ ಜನರು ವಿವಿಧ ಸರ್ಕಾರಿ ಸೇವೆಗಳಿಗಾಗಿ ಅನಗತ್ಯವಾಗಿ ಅಲೆದಾಡುವ ಅಗತ್ಯ ಕಡಿಮೆಯಾಗಲಿದ್ದು, ಪಂಚಾಯಿತಿ ಮಟ್ಟದಲ್ಲೇ ಸುಲಭವಾಗಿ ಸೇವೆ ಪಡೆಯುವ ಅವಕಾಶ ಹೆಚ್ಚಲಿದೆ.

Dailyhunt
Disclaimer: This content has not been generated, created or edited by Dailyhunt. Publisher: News Next