ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಆರಂಭವಾಗಿದ್ದ ಮಳೆ ಸಂಜೆ ವೇಳೆಗೆ ಧಾರಾಕಾರವಾಗಿ ಸುರಿದಿದ್ದು, ನಗರದ ಹಲವೆಡೆ ಅವಾಂತರ ಸೃಷ್ಟಿಸಿದೆ. ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶ, ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಯಿತು.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 24ರವರೆಗೂ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆದರೆ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ಈ ಬಾರಿ ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಹೆಚ್ಚಿಗೆ ಚಳಿ ಇರಲಿದೆ ಎಂದು ತಿಳಿಸಿದ್ದಾಅರೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ಅಂದರೆ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮುಂದಿನ ಮೂರು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ. ಹೀಗಿದ್ದರೂ ಅಕ್ಟೋಬರ್ 25ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯ ಪ್ರಮಾಣ ಗಣನೀಯವಾಗಿ ತಗ್ಗುವ ಸಾಧ್ಯತೆ ಇದೆ ಎಂದು ವಿವರಿಸಿದ್ದಾರೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ . ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ಬಹಳ ಕಡಿಮೆ ಇವೆ. ಈ ವರ್ಷ ವಾಡಿಕೆಯ ಮಳೆಯ ಪ್ರಮಾಣ ಬಹಳ ಕಡಿಮೆ ಇದ್ದು, ಶೇ.30-40ರಷ್ಟು ಕಡಿಮೆ ಮಳೆಯಾಗಿದೆ.
ಈ ಬಾರಿ ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಹೆಚ್ಚಿನ ಚಳಿ ಇರಲಿದೆ. ಅದರಲ್ಲಿಯೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಒಳನಾಡಲ್ಲಿ ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.
*ಶರಾವತಿ ಪಂಪ್ಡ್ ಸ್ಟೋರೇಜ್, ಮೇಕೆದಾಟು ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಅನುಮೋದನೆ**ಬೀದಿನಾಯಿಯನ್ನು ಮರಕ್ಕೆ ನೇತುಹಾಕಿ ಹೊಡೆದು ಕೊಂದ ದುಷ್ಕರ್ಮಿಗಳು*: *ವಿಡಿಯೋ ವೈರಲ್*

