Dailyhunt Logo
  • Light mode
    Follow system
    Dark mode
    • Play Story
    • App Story
ಬಾಗಲಕೋಟೆ | ಕಬ್ಬು ಬೆಳೆಗಾರರೊಂದಿಗೆ ಸಭೆ ಇಂದು: ಕಾಶಪ್ಪನವರ

ಬಾಗಲಕೋಟೆ | ಕಬ್ಬು ಬೆಳೆಗಾರರೊಂದಿಗೆ ಸಭೆ ಇಂದು: ಕಾಶಪ್ಪನವರ

ಬಾಗಲಕೋಟೆ: ಕಾರ್ಖಾನೆ ಮಾಲೀಕರು ತಮ್ಮ ವ್ಯಾಪ್ತಿಯ ರೈತರೊಂದಿಗೆ ಮಾತುಕತೆ ನಡೆಸಿ, ಅವರ ಮನವೊಲಿಸುವ ಮೂಲಕ ಕಾರ್ಖಾನೆಗಳನ್ನು ಆರಂಭಿಸುವ ಕೆಲಸ ಮಾಡಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವ ವಿಜಯಾನಂದ ಕಾಶಪ್ಪನವರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರ ವಿವಿಧ ಬೇಡಿಕೆ ಕುರಿತು ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ನಡೆದ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ರೈತರ ಸಮಸ್ಯೆಗಳು ಹಾಗೂ ಕಬ್ಬು ನುರಿಸುವ ಹಂಗಾಮು ಆರಂಭಿಸುವ ಕುರಿತು ಚರ್ಚಿಸಿದರು. ಕಾರ್ಖಾನೆಯವರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ರೈತರ ಮನವೊಲಿಸುವ ನಿಟ್ಟಿನಲ್ಲಿ ನ.4 ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಬ್ಬು ಬೆಳೆಗಾರರೊಂದಿಗೆ ಸಭೆ ನಡೆಸಲಾಗುವುದು. ಕಾರ್ಖಾನೆ ಮಾಲೀಕರು ತಮ್ಮ ವ್ಯಾಪ್ತಿಯ ರೈತರನ್ನು ಸೇರಿಸಿ ಅವರ ಸಮಸ್ಯೆಗಳನ್ನು ಆಲಿಸಿಸಬೇಕು ಎಂದರು.

ಜಿಲ್ಲೆಯಲ್ಲಿ ಈಗಾಗಲೇ 135 ಕಡೆ ಕಬ್ಬಿಗೆ ಬೆಂಕಿ ಅವಘಡ ಸಂಭವಿಸಿದ್ದು, ಅಂದಾಜು ₹4 ಕೋಟಿ ನಷ್ಟವಾಗಿದೆ. ರೈತರು ರಸ್ತೆಯ ಮೇಲೆ ಹೋರಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಂಡು ರೈತರಿಗೆ ಅನುಕೂಲ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಕ್ಕರೆ ಮಾರಾಟ ಬೆಲೆ ಹಾಗೂ ಎಫ್‌ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ಸರ್ಕಾರ ಸಕ್ಕರೆ ಎಂಎಸ್‌ಪಿ ನಿಗದಿಪಡಿಸಿದ ಬಳಿಕ ರಾಜ್ಯ ಸರ್ಕಾರವು ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿ ಪಡಿಸಬೇಕಿದೆ. ಎಂಎಸ್‌ಪಿ ನಿಗದಿಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದರು.

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ತೀವ್ರ ಬರಗಾಲ ಆವರಿಸಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ರೈತರ ಪರವಾಗಿ ಕಾರ್ಖಾನೆಗಳು ನಿಲ್ಲಬೇಕು ಎಂದರು.

ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕರಿ ಸಿದ್ದಾರ್ಥ ಗೋಯಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani