ಶಿವಮೊಗ್ಗ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದೇಶದ 13 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
ಮತದಾರರ ಪಟ್ಟಿಯಲ್ಲಿ ಎಲ್ಲ ಅರ್ಹ ನಾಗರಿಕರ ಹೆಸರನ್ನು ಸೇರ್ಪಡೆಗೊಳಿಸುವುದು ಹಾಗೂ ಪಟ್ಟಿಯನ್ನು ದೋಷರಹಿತವಾಗಿಸುವುದು ಈ ವಿಶೇಷ ಸಮಗ್ರ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
ಮತದಾರರು ಗಣತಿ ನಮೂನೆಯನ್ನು ಸ್ವೀಕರಿಸಿದ ಬಳಿಕ ಕಡ್ಡಾಯವಾಗಿ ಭರ್ತಿ ಮಾಡಿ ಬೂತ್ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬೇಕು. ನಮೂನೆ ಸಲ್ಲಿಸದಿದ್ದಲ್ಲಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೇ ಇರುವ ಸಾಧ್ಯತೆ ಇರುವುದರಿಂದ ನಿರ್ಲಕ್ಷ್ಯ ವಹಿಸಬಾರದು ಎಂದು ಎಚ್ಚರಿಸಿದರು.
ಮತದಾರರಿಂದ ಮಾಹಿತಿ ಸಂಗ್ರಹಿಸುವ ವೇಳೆ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ. ಈಗಾಗಲೇ ಹಿಂದಿನ ಮತದಾರರ ಪಟ್ಟಿಯ ಮಾಹಿತಿಯನ್ನು ಮ್ಯಾಪಿಂಗ್ ಮಾಡಿರುವುದರಿಂದ ಪೂರಕ ಮಾಹಿತಿ ನೀಡಿದರೆ ಸಾಕಾಗುತ್ತದೆ. ಆದರೆ ಮ್ಯಾಪಿಂಗ್ ಆಗದ ಮತದಾರರು ಸರ್ಕಾರ ಗುರುತಿಸಿರುವ 12 ದಾಖಲೆಗಳಲ್ಲಿ ಯಾವುದಾದರೊಂದನ್ನು ಸಲ್ಲಿಸಬಹುದು ಎಂದು ತಿಳಿಸಿದರು.
ಮತಗಟ್ಟೆ ಮಟ್ಟದ ಅಧಿಕಾರಿಗಳ ಜೊತೆಗೆ ಮತಗಟ್ಟೆ ಏಜೆಂಟರಿಗೂ ಗಣತಿ ನಮೂನೆಗಳನ್ನು ಸಂಗ್ರಹಿಸಿ ಅಧಿಕಾರಿಗಳಿಗೆ ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ನೀಡಿದೆ. ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ಪ್ರತಿದಿನ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಅಕ್ಟೋಬರ್ 3ರೊಳಗೆ ಆಕ್ಷೇಪಣೆಗಳ ವಿಲೇವಾರಿ ಮಾಡಿ, ಅಕ್ಟೋಬರ್ 7ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಭಿಷೇಕ್ ವಿ., ಚುನಾವಣಾ ತಹಶೀಲ್ದಾರ್ ಮಂಜುಳಾ ಹೆಗಡಾಳ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-42-1304914390

