ಭದ್ರಾವತಿ: ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚುವರಿ ನೀರು ಹರಿಸಲು ಆದೇಶಿಸಿದ್ದನ್ನು ವಿರೋಧಿಸಿ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಲಕ್ಕವಳ್ಳಿ ಜಲಾಶಯದ ಬಳಿ ಇರುವ ಭದ್ರಾ ಮೇಲ್ದಂಡೆ ಯೋಜನೆ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡ ಶಾಮನೂರು ಲಿಂಗರಾಜ್ ಮಾತನಾಡಿ, 'ಈ ವರ್ಷ ಮುಂಗಾರು ಕೈಕೊಟ್ಟಿರುವುದರಿಂದ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಿದೆ. ನೀರಿನ ಕೊರತೆ ಇರುವ ಸಂದರ್ಭದಲ್ಲೂ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ಈಗಾಗಲೇ 3 ಟಿಎಂಸಿ ಅಡಿ ನೀರು ಜಲಾಶಯದಿಂದ ಹರಿಸಲಾಗಿದೆ. ಈಗ ಹೆಚ್ಚುವರಿಯಾಗಿ 1 ಟಿಎಂಸಿ ಅಡಿ ನೀರು ಹರಿಬಿಡಲು ನೀಡಿರುವ ಆದೇಶ ಅವೈಜ್ಞಾನಿಕವಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ಡಿ.ವಿ. ವೀರೇಶ್ ಮಾತನಾಡಿ, 'ಹೆಚ್ಚುವರಿಯಾಗಿ ನೀರು ಬಿಡುವ ಆದೇಶದಿಂದಾಗಿ ಬೇಸಿಗೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ಉದ್ದೇಶಕ್ಕೆ ಹಾಗೂ ತೋಟಗಾರಿಕಾ ಬೆಳೆಗಳಿಗೆ ನೀರಿನ ತೀವ್ರ ಕೊರತೆ ಎದುರಾಗಲಿದೆ' ಎಂದರು.
ಪ್ರತಿಭಟನಾ ಸ್ಥಳಕ್ಕೆ ಭದ್ರಾವತಿ ತಹಶೀಲ್ದಾರ್ ಪ್ರದೀಪ್ ದೇವಗಿರಿ ಅವರು ಬಂದು ಮನವಿ ಸ್ವೀಕರಿಸಿದರು.
ರೈತ ಮುಖಂಡರಾದ ಕೆ.ಟಿ. ಗಂಗಾಧರ್, ಯಶವಂತರಾವ್ ಘೋರ್ಪಡೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
261103-43-182315050

