Dailyhunt Logo
  • Light mode
    Follow system
    Dark mode
    • Play Story
    • App Story
ದಿಶಾ ಸಾಲಿಯಾನ್ ಸಾವಿನ ಪ್ರಕರಣ: ಶಾಸಕ ಆದಿತ್ಯ ಠಾಕ್ರೆ ವಿರುದ್ಧ ಎಫ್‌ಐಆರ್‌

ದಿಶಾ ಸಾಲಿಯಾನ್ ಸಾವಿನ ಪ್ರಕರಣ: ಶಾಸಕ ಆದಿತ್ಯ ಠಾಕ್ರೆ ವಿರುದ್ಧ ಎಫ್‌ಐಆರ್‌

ವದೆಹಲಿ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಕೇಂದ್ರ ತನಿಖಾ ಸಂಸ್ಥೆ) ಶಾಸಕ ಆದಿತ್ಯ ಠಾಕ್ರೆ, ನಟರಾದ ಡಿನೊ ಮೊರಿಯಾ ಹಾಗೂ ರಿಯಾ ಚಕ್ರವರ್ತಿ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ.

ಆದಿತ್ಯ ಠಾಕ್ರೆ, ಡಿನೊ ಮೊರಿಯಾ, ರಿಯಾ ಚಕ್ರವರ್ತಿ ಮಾತ್ರವಲ್ಲದೆ ಹಲವರ ವಿರುದ್ಧ ಸೋಮವಾರ ಎಫ್‌ಐಆರ್‌ ದಾಖಲು ಮಾಡಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.

ಬಾಂಬೆ ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವಂತೆ ಆದೇಶಿಸಿದ ಎರಡು ವಾರಗಳ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.

ಕೊಲೆ, ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶಪಡಿಸುವಿಕೆ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪಗಳಿಗೆ ಸಂಬಂಧಿಸಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಿತ್ಯ ಠಾಕ್ರೆ ಅವರ ತಂದೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಇತರರು ಈ ಪ್ರಕರಣವನ್ನು ಮುಚ್ಚಿಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು, ದಾಖಲೆಗಳನ್ನು ನಾಶಪಡಿಸಿದ ಅಥವಾ ದಾಖಲೆಗಳನ್ನು ತಿದ್ದಿದ ಮತ್ತು ಕಾನೂನುಬಾಹಿರ ಉದ್ದೇಶಗಳಿಗಾಗಿ ಆರೋಪಿಗಳನ್ನು ರಕ್ಷಿಸಲು ಸಾರ್ವಜನಿಕ ಹಣ, ಸಿಬ್ಬಂದಿ ಮತ್ತು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳ ವಿರುದ್ಧವೂ ತನಿಖೆ ನಡೆಸಬೇಕಾಗಿದೆ ಎಂದು ಸಿಬಿಐ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ.

ಆದಿತ್ಯ ಠಾಕ್ರೆ, ಡಿನೊ ಮೊರಿಯಾ, ರಿಯಾ ಚಕ್ರವರ್ತಿ, ಸೂರಜ್ ಪಂಚೋಲಿ, ತಡವಾಗಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ದಿಶಾ ಸಾಲಿಯಾನ್ ಅವರ ಸಾವಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಕಡತಗಳನ್ನು ನೀಡುವಂತೆ ಕೋರಿ ಕೇಂದ್ರ ತನಿಖಾ ಸಂಸ್ಥೆಯು ಪೊಲೀಸರಿಗೆ ಪತ್ರ ಬರೆದಿತ್ತು.

2020ರ ಜೂನ್ 8ರಂದು, ಮುಂಬೈ ಉಪನಗರ ಮಲಾಡ್‌ನಲ್ಲಿರುವ ವಸತಿ ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯಾನ್ ಮೃತಪಟ್ಟಿದ್ದರು. ಘಟನೆ ನಡೆದು ಆರು ದಿನಗಳ ಬಳಿಕ ಸುಶಾಂತ್ ಮೃತದೇಹ, ಬಾಂದ್ರಾದ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ದಿಶಾ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು, ಆತ್ಮಹತ್ಯೆ ಎಂದು ವರದಿ ಸಲ್ಲಿಸಿದ್ದರು.

ತಮ್ಮ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲ್ಲಲಾಗಿದೆ ಎಂದು ಆರೋಪಿಸಿ ತಂದೆ ಸತೀಶ್ ಸಾಲಿಯನ್ ಕಳೆದ ವರ್ಷ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶಿವಸೇನಾ(ಯುಬಿಟಿ) ನಾಯಕ ಆದಿತ್ಯ ಠಾಕ್ರೆ ವಿರುದ್ಧ ಎಫ್‌ಐಆರ್ ದಾಖಲಿಸಿ, ಸಿಬಿಐ ತನಿಖೆ ನಡೆಸಬೇಕೆಂದು ಕೋರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani