Thursday, 04 Mar, 9.26 am ಪ್ರಜಾವಾಣಿ

ಜಿಲ್ಲೆ
ದೌರ್ಜನ್ಯ: ಪರಿಹಾರ ತುರ್ತು ವಿತರಿಸಿ

ಬೀದರ್: ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17ರ ಅಡಿ ಎಫ್‍ಐಆರ್ ದಾಖಲಾದ 15 ದಿನಗಳೊಳಗೆ ಸಂತ್ರಸ್ತರಿಗೆ ಶೇ 25 ಹಾಗೂ ದೋಷಾರೋಪ ಪಟ್ಟಿ ಸಲ್ಲಿಕೆಯಾದ ಕೂಡಲೇ ಶೇ 50 ರಷ್ಟು ಪರಿಹಾರ ಧನ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.

2020ರ ಜನವರಿ 1ರಿಂದ ಡಿಸೆಂಬರ್ ವರೆಗೆ ದಾಖಲಾದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ 50 ಜನ ಸಂತ್ರಸ್ತರಿಗೆ ₹82,25,000 ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಈವರೆಗೆ ಸಂಭವಿಸಿದ ಪ್ರಕರಣಗಳ ಸಂತ್ರಸ್ತರಿಗೆ ಆದಷ್ಟು ಬೇಗ ಪರಿಹಾರ ಧನ ವಿತರಿಸಬೇಕು ಎಂದು ಸಲಹೆ ಮಾಡಿದರು.

ಜಿ.ಪಂ ಸಿಇಒ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಉಪ ವಿಭಾಗಾಧಿಕಾರಿಗಳಾದ ಗರಿಮಾ ಪನ್ವಾರ್, ಭುವನೇಶ ಪಾಟೀಲ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರೋಜಾ ಇದ್ದರು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Prajavani
Top